ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

KPSC | 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ: ಡಿ.29ಕ್ಕೆ ಮರು ಪರೀಕ್ಷೆ

Published : 1 ಅಕ್ಟೋಬರ್ 2024, 14:55 IST
Last Updated : 1 ಅಕ್ಟೋಬರ್ 2024, 14:55 IST
ಫಾಲೋ ಮಾಡಿ
Comments

ಬೆಂಗಳೂರು: ಗೆಜೆಟೆಡ್‌ ಪ್ರೊಬೆಷನರಿ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಮರುಪರೀಕ್ಷೆಯನ್ನು ಡಿಸೆಂಬರ್ 29ಕ್ಕೆ ನಿಗದಿ ಮಾಡಿ, ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ಡಿಸೆಂಬರ್ 29ರಂದು ಇತರ ಯಾವುದೇ ಪರೀಕ್ಷೆ ನಿಗದಿಯಾಗಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಂಡೇ ಮರುಪರೀಕ್ಷೆಗೆ ಆ ದಿನವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇತರ ಯಾವುದೇ ಪರೀಕ್ಷೆಗಳನ್ನು ಡಿ.29ಕ್ಕೇ ನಿಗದಿ ಮಾಡಿದರೆ, ಅದಕ್ಕೆ ಆಯೋಗ ಹೊಣೆಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡುವುದಿಲ್ಲ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

‘ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿಯ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ.

ಸೆ.26ರಂದು ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಲು ಆಯೋಗದ ಸಭೆ ನಡೆಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಆಗಸ್ಟ್ 27ರಂದು ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ, ಪ್ರಶ್ನೆ ಪತ್ರಿಕೆ 1 ಮತ್ತು 2ರಲ್ಲಿನ ಪ್ರಶ್ನೆಗಳನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡಿದಾಗ ಹಲವು ತಪ್ಪುಗಳು ನುಸುಳಿದ್ದವು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಆಗ್ರಹಿಸಿದ್ದರು. ಈ ಬೇಡಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡಪರ ಸಂಘಟನೆಗಳೂ ದನಿಗೂಡಿಸಿದ್ದವು.

ಹೀಗಾಗಿ, ಎರಡು ತಿಂಗಳ ಒಳಗೆ ಮರು ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಎಸ್‌ಸಿಗೆ ಸೂಚನೆ ನೀಡಿದ್ದರು. ಮುಖ್ಯಮಂತ್ರಿ ಸೂಚನೆ ನೀಡಿದ ನಂತರ ಆಯೋಗದ ಮೂರು ಸಭೆಗಳು ನಡೆದರೂ ಮರು ಪರೀಕ್ಷೆ ದಿನಾಂಕ ನಿಗದಿ ಆಗಿರಲಿಲ್ಲ. ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸುವಂತೆ ಕೆಲವು ಸದಸ್ಯರು ಪಟ್ಟು ಹಿಡಿದಿದ್ದರು ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT