ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ರಾಂತಿಗಾಗಿ ರೆಸಾರ್ಟ್‌ ಸೇರಿದ ಸಿಎಂ, ಡಿಸಿಎಂ

Published 8 ಮೇ 2024, 15:36 IST
Last Updated 8 ಮೇ 2024, 15:36 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ ಎರಡು ತಿಂಗಳಿಗೂ ಹೆಚ್ಚು ಸಮಯದಿಂದ ಲೋಕಸಭಾ ಚುನಾವಣೆಗಾಗಿ ಬೆವರು ಹರಿಸಿದ್ದ ವಿವಿಧ ರಾಜಕೀಯ ಪಕ್ಷಗಳ ನಾಯಕರು ಎರಡನೇ ಹಂತದ ಮತದಾನದ ಬಳಿಕ ವಿಶ್ರಾಂತಿಗೆ ಮೊರೆ ಹೋಗಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ಗೆ ಸಂಬಂಧಿಸಿದಂತೆ ರಾಜಕೀಯದ ಬಿಸಿ ಏರಿರುವುದರಿಂದ ಜೆಡಿಎಸ್‌ ನಾಯಕರು ತೀವ್ರ ಒತ್ತಡಕ್ಕೆ ಸಿಲುಕಿದ್ದಾರೆ. ಆದರೆ, ಕಾಂಗ್ರೆಸ್‌ ನಾಯಕರು ನಿರುಮ್ಮಳವಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರವೇ ವಿಶ್ರಾಂತಿಗಾಗಿ ರೆಸಾರ್ಟ್‌ಗೆ ತೆರಳಿದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿಕ್ಕಮಗಳೂರಿನ ಸೆರಾಯ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದರು. ಬೆಂಗಳೂರು ಮೂಲದ ಸಚಿವರು ಬೆಂಗಳೂರಿನಲ್ಲೇ ಇದ್ದರೆ, ಉಳಿದವರು ತವರು ಜಿಲ್ಲೆಗಳಲ್ಲೇ ಕುಟುಂಬದವರ ಜತೆ ಕಾಲ ಕಳೆದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧಪಕ್ಷದ ನಾಯಕ ಆರ್‌.ಅಶೋಕ ಅವರು ಬುಧವಾರ ಬೆಂಗಳೂರಿನಲ್ಲೇ ಇದ್ದರು. ವಿಜಯೇಂದ್ರ ಅವರು ಬುಧವಾರ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಜೂನ್‌ 3ಕ್ಕೆ ವಿಧಾನಪರಿಷತ್‌ನ ಆರು ಸ್ಥಾನಗಳಿಗೆ ಮತದಾನ ಇರುವುದರಿಂದ ಅಭ್ಯರ್ಥಿಗಳ ಆಯ್ಕೆ ಸೇರಿ ಇತರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಂದೆರಡು ದಿನಗಳಲ್ಲೇ ಪಕ್ಷದ ಪ್ರಮುಖ ನಾಯಕರ ಸಭೆಯನ್ನು ಕರೆಯಲು ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಅಲ್ಲದೇ, ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಶಾಸಕ ವಿ.ಸುನಿಲ್‌ಕುಮಾರ್‌, ಮಾಜಿ ಸಚಿವ ಸಿ.ಟಿ.ರವಿ ಅವರನ್ನು ತೆಲಂಗಾಣ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ನಡೆಯುವ ಚುನಾವಣಾ ಕಾರ್ಯಕ್ಕೆ ನಿಯೋಜಿಸಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಿಜೆಪಿಯ ಬಹುತೇಕ ನಾಯಕರು ತಮ್ಮ ಮನೆಗಳಲ್ಲಿ ಕುಟುಂಬದವರ ಜತೆ ಕಾಲ ಕಳೆಯುವ ಮೂಲಕ ಎರಡು ತಿಂಗಳ ಓಡಾಟದ ದಣಿವು ತೀರಿಸಿಕೊಳ್ಳುವ ಪ್ರಯತ್ನ ನಡೆಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜೆಡಿಎಸ್‌ ನಾಯಕರು ತೀವ್ರ ಇಕ್ಕಟ್ಟಿಗೆ ಸಿಲುಕಿದ್ದಾರೆ. ಎಚ್‌.ಡಿ.ರೇವಣ್ಣ ಜೈಲು ಪಾಲಾಗಿರುವುದರಿಂದ ದೇವೇಗೌಡರ ಕುಟುಂಬವು ಆಘಾತದಿಂದ ಹೊರಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT