ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂಬಾಗಿಲ ರಾಜಕಾರಣ ಬಿಡಿ: ವಿರೋಧ ಪಕ್ಷಗಳ ಮುಖಂಡರಿಗೆ ಸಿದ್ದರಾಮಯ್ಯ ಸಲಹೆ

Published 15 ಆಗಸ್ಟ್ 2024, 15:58 IST
Last Updated 15 ಆಗಸ್ಟ್ 2024, 15:58 IST
ಅಕ್ಷರ ಗಾತ್ರ

ಬೆಂಗಳೂರು:‘ಮತದಾರರ ತೀರ್ಪು ಧಿಕ್ಕರಿಸಿ ನಡೆಸುವ ಹಿಂಬಾಗಿಲ ರಾಜಕಾರಣವನ್ನು ಇತಿಹಾಸದಲ್ಲಿ ಜನರು ಎಂದಿಗೂ ಕ್ಷಮಿಸಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಫೀಲ್ಡ್‌ ಮಾರ್ಷಲ್ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ರಾಜಭವನವನ್ನು ಬಳಸಿಕೊಂಡು ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಯುತ್ತಿದೆ ಎಂದು ಈ ಹಿಂದೆ ಮಾಡಿದ್ದ ಆರೋಪವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದರು.

ಮುಡಾ ನಿವೇಶನ ಹಂಚಿಕೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವಾಗಿ ಮುಖ್ಯಮಂತ್ರಿಯವರ ರಾಜೀನಾಮೆಗೆ ಆಗ್ರಹಿಸುತ್ತಿರುವ ವಿರೋಧ ಪಕ್ಷಗಳ ಮುಖಂಡರನ್ನು ತಮ್ಮ ಭಾಷಣದ ಕೊನೆಯಲ್ಲಿ ತರಾಟೆಗೆ ತೆಗೆದುಕೊಂಡ ಅವರು, ‘ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿ ಜನರು ನೀಡಿದ ತೀರ್ಪನ್ನು ಗೌರವಿಸಿ ಸಂವಿಧಾನದ ಆಶಯಗಳ ಪ್ರಕಾರ ಜವಾಬ್ದಾರಿಯಿಂದ ನಡೆಯಬೇಕು’ ಎಂದು ಸಲಹೆ ನೀಡಿದರು.

‘ಲೋಕಸಭಾ ಚುನಾವಣೆಯಲ್ಲಿ ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿರುವ ಮತದಾರರು, ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ’ ಎಂದು ಹೇಳಿದರು.

‘ಜಾತಿ-ಮತದ ಆಧಾರದ ವಿಭಜನೆಯ ರಾಜಕಾರಣ ಮಾಡುವ ವಿಚ್ಛಿದ್ರಕಾರಿ ಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು. ಸಾಂವಿಧಾನಿಕ ಸಂಸ್ಥೆಗಳು ಮತ್ತು ಆಶಯಗಳನ್ನು ಬುಡಮೇಲು ಮಾಡುವ ಮನಸ್ಥಿತಿಯ ವ್ಯಕ್ತಿಗಳನ್ನು ಅಧಿಕಾರದಿಂದ ಮುಲಾಜಿಲ್ಲದೆ ದೂರ ಇಡಬೇಕು’ ಎಂದು ಕರೆ ಕೊಟ್ಟರು.

‘ನೆರೆಯ ದೇಶಗಳಲ್ಲಿ ತಲೆದೋರಿರುವ ಪ್ರಕ್ಷುಬ್ಧ ಪರಿಸ್ಥಿತಿ ಇಲ್ಲಿಯೂ ಎದುರಾಗಿ ಬಿಡಬಹುದು. ಎಲ್ಲ ಜಾತಿ, ಮತಗಳ ಜನರು ಒಟ್ಟುಗೂಡಿ ಸ್ವಾತಂತ್ರ್ಯ ಗಳಿಸಿದ್ದೇವೆ. ಎಲ್ಲರೂ ಒಟ್ಟುಗೂಡಿ ಅಮೂಲ್ಯ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಾಗಿದೆ’ ಎಂದು ಕರೆ ನೀಡಿದರು.

ಪಾಲು ಕೊಡಲು ಸತಾಯಿಸುತ್ತಿರುವ ಕೇಂದ್ರ: ಸಿಎಂ

‘ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಂಬಂಧವನ್ನು ಸಂವಿಧಾನವು ಸ್ಪಷ್ಟಪಡಿಸಿದೆ. ಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡದೇ ಕೇಂದ್ರ ಸರ್ಕಾರ ಸತಾಯಿಸುತ್ತಿದೆ’ ಎಂದು ಸಿದ್ದರಾಮಯ್ಯ ದೂರಿದರು. ‘ಜನಕಲ್ಯಾಣ ಕಾರ್ಯಕ್ರಮ ಅನುಷ್ಠಾನಗೊಳಿಸುವುದು ರಾಜ್ಯಗಳ ಜವಾಬ್ದಾರಿ. ಅವುಗಳಿಗೆ ಪೂರಕವಾಗಿ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ. ಆದರೆ ಕೇಂದ್ರ ಈ ಆಶಯದಿಂದ ದೂರ ಸರಿಯುತ್ತಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ’ ಎಂದು ಕಿಡಿಕಾರಿದರು.

‘ಕೇಂದ್ರದಿಂದ ನ್ಯಾಯಯುತವಾಗಿ ಬರಬೇಕಾದ ಪರಿಹಾರದ ಮೊತ್ತ ಪಡೆಯಲು ನ್ಯಾಯಾಲಯದ ಮೊರೆಹೋಗುವ ಅನಿವಾರ್ಯ ಎದುರಾಗಿದೆ. ಈ ಬೆಳವಣಿಗೆ ಜನಹಿತಕ್ಕೆ ಒಳ್ಳೆಯದಲ್ಲ. ಭವಿಷ್ಯದಲ್ಲಾದರೂ ಕೇಂದ್ರ ಸರ್ಕಾರವು ರಾಜ್ಯಗಳಿಗೆ ನ್ಯಾಯಯುತ ಅನುದಾನ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT