ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ

Published 26 ಮೇ 2024, 0:30 IST
Last Updated 26 ಮೇ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್‌ ಬಿರುಸಿನ ತಯಾರಿ ಆರಂಭಿಸಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸಚಿವರ ಜತೆ ಶನಿವಾರ ಚರ್ಚಿಸಿದ್ದು, ಸಮುದಾಯ, ಪ್ರಾದೇಶಿಕತೆ ಆಧಾರದಲ್ಲಿ ಬೇಡಿಕೆಯೂ ಹೆಚ್ಚುತ್ತಿದೆ.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ವಸತಿ ಸಚಿವ ಬಿ.ಜೆಡ್‌. ಜಮೀರ್‌ ಅಹಮದ್ ಖಾನ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಜಮೀರ್‌ ಅಹಮದ್‌ ನೇತೃತ್ವದಲ್ಲಿ ಶಿವಕುಮಾರ್‌ ಅವರನ್ನು ಶುಕ್ರವಾರ ಭೇಟಿಮಾಡಿದ್ದ ಮುಸ್ಲಿಂ ಮುಖಂಡರ ನಿಯೋಗ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಭ್ಯವಾಗುವ ಏಳು ಸ್ಥಾನಗಳ ಪೈಕಿ ಎರಡನ್ನು ತಮ್ಮ ಸಮುದಾಯಕ್ಕೆ ನೀಡುವಂತೆ ಬೇಡಿಕೆ ಮಂಡಿಸಿತ್ತು.

ಶನಿವಾರ ಭೇಟಿಮಾಡಿದ ನಾಲ್ವರು ಸಚಿವರೂ ಪ್ರತ್ಯೇಕವಾಗಿ ಕೆಪಿಸಿಸಿ ಅಧ್ಯಕ್ಷರ ಜತೆ ಚರ್ಚಿಸಿದ್ದಾರೆ. ಕೊನೆಯಲ್ಲಿ ಎಲ್ಲ ಸಚಿವರ ಜತೆಗೂ ಒಟ್ಟಾಗಿ ಒಂದು ಸುತ್ತಿನ ಚರ್ಚೆ ನಡೆಸಲಾಗಿದೆ. ಕೆಲವು ನಿರ್ದಿಷ್ಟ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸುವುದು, ಪ್ರದೇಶವಾರು ಪ್ರಾತಿನಿಧ್ಯದ ಕುರಿತು ಚರ್ಚೆ ನಡೆದಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಶಾಸಕರ ನಿಯೋಗದ ಭೇಟಿ: ರಾಯಚೂರು ಜಿಲ್ಲೆಯ ಕಾಂಗ್ರೆಸ್‌ ಶಾಸಕರಾದ ಬಸನಗೌಡ ದದ್ದಲ್‌, ಹಂಪನಗೌಡ ಬಾದರ್ಲಿ ಮತ್ತು ಬಸವನಗೌಡ ತುರವೀಹಾಳ ಅವರನ್ನೊಳಗೊಂಡ ನಿಯೋಗವು ಶಿವಕುಮಾರ್‌ ಅವರನ್ನು ಶನಿವಾರ ಭೇಟಿಮಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್‌ ಅವರಿಗೆ ಪರಿಷತ್‌ ಸದಸ್ಯ ಸ್ಥಾನ ನೀಡುವಂತೆ ಆಗ್ರಹಿಸಿತು.

ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗಿದ್ದರು. ಅಲ್ಲಿ ಮತದಾನ ಮುಗಿದಿ ರುವುದರಿಂದ ರಾಜ್ಯದ ವಿಧಾನ ಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲು ಅವಕಾಶವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿವಕುಮಾರ್‌ ಅವರು ಸಂಭವನೀಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ತಿಂಗಳಾಂತ್ಯದಲ್ಲಿ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ನೇರ ಚುನಾವಣೆಗೆ ಸ್ಪರ್ಧಿಸಿ ಗೆಲ್ಲಲು ಸಾಧ್ಯವಾಗದ ಸಮುದಾಯಗಳಿಗೆ ಹೆಚ್ಚಿನ ಅವಕಾಶ ನೀಡುವಂತೆ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಸೇರಿದಂತೆ ಕೆಲವರು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT