ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ ತೆರಿಗೆ ಪಾಲು ಈಗಲಾದರೂ ಸಿಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Published 1 ಜುಲೈ 2024, 20:18 IST
Last Updated 1 ಜುಲೈ 2024, 20:18 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ನ್ಯಾಯಯುತ ತೆರಿಗೆ ಪಾಲು ನೀಡುತ್ತಿಲ್ಲ. ಈಗ ರಚನೆಯಾಗುತ್ತಿರುವ 16ನೇ ಹಣಕಾಸು ಆಯೋಗದ ಮೂಲಕವಾದರೂ ಅನ್ಯಾಯ ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ವಿಧಾನಸೌಧದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸೋಮವಾರ ಆಯೋಜಿಸಿದ್ದ ಜಿಎಸ್‌ಟಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಹಾಗೂ 2024-25ನೇ ಸಾಲಿನ ಮುಖ್ಯಮಂತ್ರಿ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.

15 ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಶೇ 1.7ರಷ್ಟು ತೆರಿಗೆ ಕಡಿಮೆಯಾಗಿದೆ. ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದರು.

ಗ್ಯಾರಂಟಿ ಯೋಜನೆಗಳಿಗೆ ₹60 ಸಾವಿರ ಕೋಟಿ ಅಗತ್ಯವಿದೆ. ಸಮಾಜದಲ್ಲಿ ಸಮಾನತೆ ದೊರಕಲು ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು. ಆರ್ಥಿಕವಾಗಿ ದುರ್ಬಲರಾದವರಿಗೆ ವಿಶೇಷ ಕಾರ್ಯಕ್ರಮ ನೀಡಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಧರ್ಮ, ಜಾತಿಗಳ ಬಡವರಿಗೆ ಶಕ್ತಿ ತುಂಬಬೇಕಾದರೆ ಸಂಪನ್ಮೂಲ ಹೆಚ್ಚಳ ಮಾಡಬೇಕು ಎಂದರು. 

ತೆರಿಗೆ ಸೋರಿಕೆ ತಡೆಯಲು ವಾಣಿಜ್ಯ ತೆರಿಗೆ ಇಲಾಖೆ ಪ್ರಯತ್ನ ಮಾಡಿದೆ. 2022-23 ನೇ ಸಾಲಿನಲ್ಲಿ ₹1,22,821 ಕೋಟಿ ತೆರಿಗೆ ಸಂಗ್ರಹವಾಗಿದೆ. 2023-24 ನೇ ಸಾಲಿನಲ್ಲಿ ₹1,45,266 ಕೋಟಿ ಸಂಗ್ರಹಿಸಿ ವಾಣಿಜ್ಯ ತೆರಿಗೆ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಾಣಿಜ್ಯ ತೆರಿಗೆ ಇಲಾಖೆಯ 65 ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಜೀರ್‌ ಅಹ್ಮದ್‌, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT