ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಾತಿ ಗಣತಿ ವರದಿಗೆ ಲಿಂಗಾಯತರ ವಿರೋಧ; ಮರು ಗಣತಿಗೆ ಆಗ್ರಹ

Published 9 ನವೆಂಬರ್ 2023, 10:54 IST
Last Updated 9 ನವೆಂಬರ್ 2023, 10:54 IST
ಅಕ್ಷರ ಗಾತ್ರ

ಬೆಂಗಳೂರು: ಈಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ನಡೆಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.

ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಇಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿ ನೀಡದೇ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳಿವೆ. ಈ ಸಮೀಕ್ಷೆಯಲ್ಲಿ ವೀರಶೈವ–ಲಿಂಗಾಯತ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ ಎಂಬ ಮಾಹಿತಿ ಇದೆ. ಅಪೂರ್ಣ ಮಾಹಿತಿಯನ್ನು ಒಳಗೊಂಡ ಸಮೀಕ್ಷೆಯನ್ನು ಸ್ವೀಕರಿಸಿದರೆ, ಸಮಾಜಕ್ಕೆ ದೊಡ್ಡ ಮಟ್ಟದ ನಷ್ಟವಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಶಾಮನೂರು ತಿಳಿಸಿದ್ದಾರೆ.

‘ವೀರಶೈವ–ಲಿಂಗಾಯತ ಸಮುದಾಯವು ಸಕಲ ಜಾತಿ–ಜನಾಂಗಗಳಿಗೆ ಲೇಸನ್ನೇ ಬಯಸುವ ಸಮುದಾಯವಾಗಿದೆ. ನಾವು ಜಾತಿಗಣತಿಯ ವಿರೋಧಿಗಳಲ್ಲ. ಆದರೆ, ಯಾವುದೇ ವರದಿಯೂ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯವಾಗಿದೆ’ ಎಂದು ಅವರು ಹೇಳಿದ್ದಾರೆ.

ಜಾತಿಗಣತಿ ವರದಿಯು ಎಂಟು ವರ್ಷಗಳಷ್ಟು ಹಳೆಯದಾಗಿದ್ದು, ನ್ಯೂನತೆಗಳಿಂದ ಕೂಡಿದೆ. ಹೀಗಾಗಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಬೇಕು. ಸರ್ಕಾರ ಮತ್ತೊಮ್ಮೆ ಈ ಬಗ್ಗೆ ವಿವೇಚನಾಯುತವಾಗಿದೆ ಪರಾಮರ್ಶಿಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಶಾಮನೂರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT