ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚಾರದ ವೇಳೆ ಆಮಿಷ ಆರೋಪ: ಡಿಕೆಶಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Published 25 ಏಪ್ರಿಲ್ 2024, 15:55 IST
Last Updated 25 ಏಪ್ರಿಲ್ 2024, 15:55 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಆಮಿಷವೊಡ್ಡಿದ್ದಾರೆ’ ಎಂಬ ಆರೋಪದಡಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ.

ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಡಿ.ಕೆ.ಶಿವಕುಮಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಅವರು ಗುರುವಾರ ವಿಚಾರಣೆ ನಡೆಸಿದರು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿಗಳು, ‘ಸದ್ಯದ ಚುನಾವಣೆ ಪ್ರಚಾರದ ಗುಣಮಟ್ಟ ಕಳಪೆಯಾಗುತ್ತಿದೆ. ರಾಜಕಾರಣಿಗಳು ತಮ್ಮ ಭಾಷಣದ ವೇಳೆ ಭಾಷೆಯ ಮೇಲೆ ಕಾಳಜಿ ವಹಿಸಿ ಮಾತನಾಡಬೇಕು. ಇಂದು ಡಿಜಿಟಲ್‌ ಕ್ರಾಂತಿಯಾಗಿರುವಾಗ ಯಾರು ಏನು ಮಾತನಾಡುತ್ತಾರೆ ಎಂಬುದನ್ನು ತಿಳಿಯಲು ಕಷ್ಪಪಡಬೇಕಿಲ್ಲ, ದೇಶದ ಮತ್ತು ಸಮಾಜದ ಕಳಕಳಿಯಿಂದ ವರ್ತಿಸಬೇಕು’ ಎಂದು ಕಿವಿಮಾತು ಹೇಳಿ ಎಫ್‌ಐಆರ್‌ಗೆ ತಡೆ ನೀಡಿ ಆದೇಶಿಸಿದರು.

ಪ್ರಕರಣವೇನು?: ರಾಜರಾಜೇಶ್ವರಿ ನಗರದ ಅಪಾರ್ಟ್‌ಮೆಂಟ್‌ ನಿವಾಸಿಗಳೊಂದಿಗೆ ಚುನಾವಣಾ ಪ್ರಚಾರ ಸಭೆ ನಡೆಸಿದ್ದ ಡಿ.ಕೆ.ಶಿವಕುಮಾರ್‌, ‘ಅಪಾರ್ಟ್‌ಮೆಂಟ್‌ಗೆ ಸಿಎ ನಿವೇಶನ ನೀಡಬೇಕು ಹಾಗೂ ಕಾವೇರಿ ನೀರು ಒದಗಿಸಬೇಕು ಎಂದು ನಿವಾಸಿಗಳು ಬೇಡಿಕೆಯಿಟ್ಟಿದ್ದಾರೆ. ಕಾಂಗ್ರೆಸ್‌ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಗೆ (ಡಿ.ಕೆ.ಸುರೇಶ್‌) ಮತ ನೀಡಿದರೆ ನಿಮ್ಮ ಬೇಡಿಕೆಯನ್ನು ಎರಡು ಮೂರು ತಿಂಗಳಲ್ಲಿ ಈಡೇರಿಸುತ್ತೇನೆ. ಇಲ್ಲವಾದರೆ ನನ್ನನ್ನು ಏನೂ ಕೇಳಬೇಡಿ’ ಎಂದು ಮಾತನಾಡಿದ್ದ ವಿಡಿಯೊ ತುಣುಕು ಬಹಿರಂಗವಾಗಿತ್ತು. 

ಇದನ್ನು ಆಧರಿಸಿ, ಶಿವಕುಮಾರ್ ವಿರುದ್ಧ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಇದೇ 19ರಂದು ಖಾಸಗಿ ದೂರು ದಾಖಲಾಗಿತ್ತು. ನ್ಯಾಯಾಲಯದ ಆದೇಶದ ಅನ್ವಯ ಆರ್‌ಎಂಸಿ ಯಾರ್ಡ್‌ ಠಾಣಾ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT