ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಉಗ್ರ ಹಿಂದುತ್ವ ಪ್ರತಿಪಾದಕರಿಗಿಲ್ಲ ಬಿಜೆಪಿ ಟಿಕೆಟ್‌

ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪ್ರಕಟಿಸಿದ ಕಮಲ ಪಾಳಯ *ಚಿತ್ರದುರ್ಗ ಬಾಕಿ
Published 24 ಮಾರ್ಚ್ 2024, 16:33 IST
Last Updated 24 ಮಾರ್ಚ್ 2024, 16:33 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಲು ಅನುಕೂಲವಾಗಲಿದೆ ಎಂಬ ಹೇಳಿಕೆ ನೀಡಿ ಕಮಲ ಪಾಳಯಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಉತ್ತರ ಕನ್ನಡದ ಸಂಸದ ಅನಂತ ಕುಮಾರ್‌ ಹೆಗಡೆ ಅವರಿಗೆ ಪಕ್ಷವು ಟಿಕೆಟ್‌ ನಿರಾಕರಿಸಿದೆ. ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪಕ್ಷ ಭಾನುವಾರ ಪ್ರಕಟಿಸಿದೆ. 

ಉಗ್ರ ಹಿಂದುತ್ವದ ಪ್ರತಿಪಾದಕರಾದ ಪ್ರತಾಪಸಿಂಹ ಹಾಗೂ ನಳಿನ್‌ ಕುಮಾರ್ ಕಟೀಲು ಅವರಿಗೂ ಟಿಕೆಟ್‌ ನಿರಾಕರಿಸಲಾಗಿತ್ತು. ಇದೀಗ ಈ ಸಾಲಿಗೆ ಹೆಗಡೆ ಸೇರ್ಪಡೆಯಾಗಿದ್ದಾರೆ. 

ಪಕ್ಷವು ಈವರೆಗೆ ರಾಜ್ಯದ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಅದರಲ್ಲಿ ಶೇ 50ರಷ್ಟು (12) ಹಾಲಿ ಸಂಸದರಿಗೆ ಕೊಕ್‌ ನೀಡಲಾಗಿದೆ. ಚಿತ್ರದುರ್ಗ ಕ್ಷೇತ್ರಕ್ಕೆ ಹುರಿಯಾಳು ಹೆಸರನ್ನು ಇನ್ನಷ್ಟೇ ಪ್ರಕಟಿಸಬೇಕಿದೆ. ಈ ಕ್ಷೇತ್ರವನ್ನು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಪ್ರತಿನಿಧಿಸುತ್ತಿದ್ದಾರೆ. ಆಡಳಿತ ವಿರೋಧಿ ಅಲೆಯ ಕಾರಣದಿಂಧ ನಾರಾಯಣಸ್ವಾಮಿ ಬದಲು ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಹುರಿಯಾಳುವನ್ನಾಗಿ ಮಾಡಲು ಪಕ್ಷ ಯೋಜಿಸಿದೆ. ಮೂರು ಕ್ಷೇತ್ರಗಳನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಟ್ಟುಕೊಡಲು ತೀರ್ಮಾನಿಸಿದೆ. 

ಉತ್ತರ ಕನ್ನಡ ಕ್ಷೇತ್ರದಲ್ಲಿ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಣೆ ಹಾಕಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋತಿದ್ದರು. ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ. ಸುಧಾಕರ್‌ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇಲ್ಲಿ ಅಲೋಕ್ ವಿಶ್ವನಾಥ್ ಅವರು ಪ್ರಬಲ ಆಕಾಂಕ್ಷಿಯಾಗಿದ್ದರು. ಪುತ್ರನಿಗೆ ಟಿಕೆಟ್‌ ಕೈತಪ್ಪಿದರೆ ನಾನೇ ಕಣಕ್ಕೆ ಇಳಿಯುತ್ತೇನೆ ಎಂದು ಯಲಹಂಕದ ಶಾಸಕ ಎಸ್.ಆರ್.ವಿಶ್ವನಾಥ್‌ ಈಗಾಗಲೇ ಘೋಷಿಸಿದ್ದಾರೆ. 

‘ಗೋ ಬ್ಯಾಕ್‌ ಶೆಟ್ಟರ್‌’ ಅಭಿಯಾನದ ನಡುವೆಯೂ ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಅವರನ್ನು ಕಣಕ್ಕಿಳಿಸಲಾಗಿದೆ. ಶೆಟ್ಟರ್ ಅವರಿಗೆ ಟಿಕೆಟ್‌ ನೀಡುವುದಕ್ಕೆ ಜಿಲ್ಲೆಯ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಿದ ಕಾರಣಕ್ಕೆ ಶೆಟ್ಟರ್ ಬಿಜೆಪಿ ತ್ಯಜಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದು 35 ಸಾವಿರ ಮತಗಳ ಅಂತರದಿಂದ ಸೋತಿದ್ದರು. 

ರಾಯಚೂರಿನಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಹಾಗೂ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪಕ್ಷ ತಮ್ಮನ್ನೇ ಅಭ್ಯರ್ಥಿಯನ್ನಾಗಿ ಮಾಡುತ್ತದೆ ಎಂಬ ವಿಶ್ವಾಸದಲ್ಲಿ ಬಿ.ವಿ.ನಾಯಕ ಪ್ರಚಾರವನ್ನೂ ಆರಂಭಿಸಿದ್ದರು. ಆದರೆ, ಅಮರೇಶ್ವರ ನಾಯಕ ಕೈಮೇಲಾಗಿದೆ. ಅವರು ಮಾಜಿ ಸಚಿವ ಬಿ.ಶ್ರೀರಾಮುಲು ಅವರ ಹತ್ತಿರದ ಸಂಬಂಧಿ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT