ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls | ಬಿಜೆಪಿ ವಿರುದ್ಧ ಎಚ್‌ಡಿಕೆ ಅಸಮಾಧಾನ: ಮೈತ್ರಿಯಲ್ಲಿ ಬಿರುಕಿನ ಲಕ್ಷಣ

ಕೋಲಾರ ಕ್ಷೇತ್ರ ಹಂಚಿಕೆ ಬಿಕ್ಕಟ್ಟು
Published 18 ಮಾರ್ಚ್ 2024, 15:41 IST
Last Updated 18 ಮಾರ್ಚ್ 2024, 15:41 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಮತ್ತು ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರ ಧೋರಣೆ ಕುರಿತು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಇದರೊಂದಿಗೆ ಮೈತ್ರಿಕೂಟದಲ್ಲಿ ಬಿರುಕು ಮೂಡುವ ಲಕ್ಷಣಗಳು ಕಾಣಿಸಿವೆ.

ಕೋಲಾರ ಕ್ಷೇತ್ರವನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು ಹಾಕುತ್ತಿದೆ. ಇದರಿಂದ ಎರಡೂ ಪಕ್ಷಗಳ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾಗಿದೆ. ಬಿಜೆಪಿ ನಾಯಕರ ತೀರ್ಮಾನ ಹೊರಬೀಳುವ ಮುನ್ನವೇ, ‘ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ’ ಎಂದು ಕುಮಾರಸ್ವಾಮಿ ಘೋಷಿಸಿದ್ದಾರೆ.

ಲೋಕಸಭಾ ಚುನಾವಣೆ ಕುರಿತು ಜೆಡಿಎಸ್‌ ರಾಜ್ಯ ಘಟಕದ ಕಚೇರಿಯಲ್ಲಿ ಪಕ್ಷದ ‘ಕೋರ್‌ ಕಮಿಟಿ’ ಸದಸ್ಯರು, ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ‘ಬಿಜೆಪಿಯು ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ’ ಎಂದು ದೂರಿದರು.

ಮೈತ್ರಿ ಬೇಕಿತ್ತಾ?: ‘ಸೀಟು ಹಂಚಿಕೆ ಕುರಿತು ಅಧಿಕೃತವಾಗಿ ಘೋಷಣೆ ಆಗುವವರೆಗೆ ನಾನು ಮಾತನಾಡುವುದಿಲ್ಲ. ನಾವು ಬಿಜೆಪಿಯಿಂದ 6–7 ಕ್ಷೇತ್ರ ಕೇಳಿಲ್ಲ. ಕೇಳಿರುವುದೇ 3–4 ಕ್ಷೇತ್ರ. ನಮ್ಮ ಶಕ್ತಿ ಅವರಿಗೂ ಗೊತ್ತು. ಮೂರರಿಂದ ನಾಲ್ಕು ಕ್ಷೇತ್ರ ಕೊಡುತ್ತಾರೆ ಎಂಬ ನಂಬಿಕೆ ಇದೆ. ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳಲು ನಾನು ಇಷ್ಟು ಪ್ರಯತ್ನಪಡಬೇಕಿತ್ತೆ? ಈ ಹೊಂದಾಣಿಕೆ ಬೇಕಿತ್ತಾ ನನಗೆ’ ಎಂದು ಕೇಳಿದರು.

‘ಹಾಸನ, ಮಂಡ್ಯದಲ್ಲಿ ಸ್ವತಂತ್ರವಾಗಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ತ್ರಿಕೋನ ಸ್ಪರ್ಧೆಯಾದರೆ ಗೆಲುವು ಸುಲಭ. ಆದರೆ, 18 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ನಿಂದ ಬಿಜೆಪಿಗೆ ಅನುಕೂಲವಾಗುತ್ತದೆ. ನಮ್ಮ ಪಕ್ಷದ ಮತಗಳಲ್ಲಿ ಶೇಕಡ 3ರಿಂದ 4ರಷ್ಟು ಬಿಜೆಪಿ ಅಭ್ಯರ್ಥಿಗಳಿಗೆ ವರ್ಗಾವಣೆಯಾದರೂ ಅವರು ಗೆಲುವು ಸಾಧಿಸುತ್ತಾರೆ’ ಎಂದರು.

‘ಬಿಜೆಪಿ ನಮ್ಮನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ಇಲ್ಲವಾದರೆ ಚುನಾವಣೆಯಲ್ಲಿ ಪೆಟ್ಟುಬಿದ್ದರೆ ಅದರ ಸಾಧಕ– ಬಾಧಕಗಳಿಗೆ ಬಿಜೆಪಿಯೇ ಹೊಣೆಯಾಗುತ್ತದೆ. ನಾವು ಆ ಹೊಣೆಯನ್ನು ಹೊತ್ತುಕೊಳ್ಳಲು ಸಾಧ್ಯವಿಲ್ಲ’ ಎಂದು ಮಿತ್ರಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಿದರು.

ವಿಜಯಪುರ, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿಗಿಂತ ಜೆಡಿಎಸ್ ಪ್ರಬಲವಾಗಿದೆ. ಇಂತಹ ಕ್ಷೇತ್ರಗಳಲ್ಲಿ ಜೆಡಿಎಸ್‌ ನಾಯಕರನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ಈ ಕುರಿತು ಬಿಜೆಪಿ ವರಿಷ್ಠರ ಜತೆ ಚರ್ಚಿಸುವಂತೆ ತಮ್ಮ ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ ಎಂದರು.

‘ವಿಶ್ವಾಸದ ಕೊರತೆ’: ‘ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಜೆಡಿಎಸ್‌ ಪಕ್ಷವನ್ನು ಕಡೆಗಣಿಸಿದರೆ ಆಗುವ ಪರಿಣಾಮಗಳ ಕುರಿತು ಸಭೆಯಲ್ಲಿ ಚರ್ಚಿಸಿದ್ದೇವೆ. ಇವೆಲ್ಲವನ್ನೂ ಬಿಜೆಪಿ ವರಿಷ್ಠರ ಜತೆ ಚರ್ಚಿಸಿ ಸೌಹಾರ್ದಯುತವಾಗಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದೇವೆ’ ಎಂದು ಹೇಳಿದರು.

‘ಕೋರ್ ಕಮಿಟಿ’ ಅಧ್ಯಕ್ಷ ಜಿ.ಟಿ. ದೇವೇಗೌಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ, ಶಾಸಕ ಸಮೃದ್ಧಿ ಮಂಜುನಾಥ್, ಮಾಜಿ ಶಾಸಕ ತಿಮ್ಮರಾಯಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT