ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ಸಂಪುಟಕ್ಕೆ HDK? ಊಹಾಪೋಹದ ಬೆನ್ನಲ್ಲೇ ಎಚ್‌ಡಿಡಿ ಭೇಟಿಯಾದ ಕೇಂದ್ರ ಸಚಿವ

Published 7 ಜನವರಿ 2024, 11:38 IST
Last Updated 7 ಜನವರಿ 2024, 11:38 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಕೇಂದ್ರ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಇಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ, ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್‌ ಮುಂಡಾ ಅವರು ಎಚ್‌.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅತ್ಯಂತ ಪ್ರೀತಿ ವಿಶ್ವಾಸದಿಂದ ಗೌರವಿಸಲಾಯಿತು ಎಂದು ತಿಳಿಸಿದ್ದಾರೆ.

ಇದೇ ವೇಳೆ ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸುವುದು, ರಾಜ್ಯದ ತೆಂಗು ಬೆಳೆಗಾರರಿಂದ ಕೊಬ್ಬರಿ ಖರೀದಿ ಹಾಗೂ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಎಚ್‌ಡಿಕೆ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ

ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‌ಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಇರಾದೆ ಬಿಜೆಪಿ ವರಿಷ್ಠರದ್ದಾಗಿದೆ. ರಾಮಮಂದಿರ ಉದ್ಘಾಟನೆ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಐವರು ಹೊಸದಾಗಿ ಸೇರ್ಪಡೆಯಾಗಲಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ಅವರು ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳು ಹೇಳಿವೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್, ಗೆದ್ದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ, ಸಂಪುಟ ದರ್ಜೆಯ ಖಾತೆ ಖಾಲಿ ಇದೆ. ಕೃಷಿ ಖಾತೆಯ ಬಗ್ಗೆ ಕುಮಾರಸ್ವಾಮಿ ಒಲವು ಹೊಂದಿದ್ದು, ಸಂಪುಟಕ್ಕೆ ಸೇರಿದರೆ ಅದೇ ಖಾತೆ ಸಿಗುವ ಸಂಭವ ಇದೆ ಎಂಬ ಚರ್ಚೆಯೂ ನಡೆದಿದೆ. ಕೃಷಿ ಖಾತೆ ರಾಜ್ಯ ಸಚಿವರಾಗಿ ರಾಜ್ಯದವರೇ ಆದ ಶೋಭಾ ಕರಂದ್ಲಾಜೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಕುಮಾರಸ್ವಾಮಿ ಕೃಷಿ ಸಚಿವರಾದರೆ, ಶೋಭಾ ಖಾತೆ ಬದಲಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT