ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: 3 ಕ್ಷೇತ್ರದಲ್ಲಿ ಮಹಿಳೆಯರಿಗೆ ‘ಕೈ’ ಟಿಕೆಟ್‌?

Published 9 ಜನವರಿ 2024, 15:58 IST
Last Updated 9 ಜನವರಿ 2024, 15:58 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳ ಪೈಕಿ ಮೂರರಲ್ಲಿ ಮಹಿಳೆಯರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ.

ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಈ ಮೂರು ಕ್ಷೇತ್ರಗಳಿಗೆ ಮಹಿಳೆಯರಿಗೆ ಟಿಕೆಟ್‌ ನೀಡುವ ಕುರಿತಂತೆ ಚರ್ಚೆ ನಡೆದಿದೆ. ಬೆಂಗಳೂರು ಉತ್ತರದಿಂದ ಕುಸುಮಾ ಹನುಮಂತರಾಯಪ್ಪ, ಬೆಂಗಳೂರು ದಕ್ಷಿಣದಿಂದ ಸಚಿವ ರಾಮಲಿಂಗಾ ರೆಡ್ಡಿಯವರ ಮಗಳು ಸೌಮ್ಯ ರೆಡ್ಡಿ, ಬೆಂಗಳೂರು ಕೇಂದ್ರದಿಂದ ಸಚಿವ ದಿನೇಶ್‌ ಗುಂಡೂರಾವ್‌ ಅವರ ಪತ್ನಿ ಟಬು ರಾವ್ ಅವರಿಗೆ ಮಣೆ ಹಾಕಲು ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ.

ಮಹಿಳೆಯರಿಗೆ ಆದ್ಯತೆ, ಯುವ ಸಮುದಾಯಕ್ಕೆ ಅವಕಾಶ, ಒಕ್ಕಲಿಗ, ಅಲ್ಪಸಂಖ್ಯಾತ, ರೆಡ್ಡಿ ಸಮುದಾಯಕ್ಕೆ ಪ್ರಾತಿನಿಧ್ಯ ಎಂಬ ಸಮೀಕರಣದಡಿ ಟಿಕೆಟ್‌ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಗೊತ್ತಾಗಿದೆ.

ರಾಜ್ಯ ನಾಯಕರ ಜೊತೆ ನಡೆದ ಚರ್ಚೆ ಮತ್ತು ಅಭಿಪ್ರಾಯ ಸಂಗ್ರಹ ಸಂದರ್ಭದಲ್ಲಿಯೂ ಈ ಮೂರು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವ ಕುರಿತು ಒಲವು ವ್ಯಕ್ತವಾಗಿದೆ. ರಾಮಲಿಂಗಾ ರೆಡ್ಡಿ, ದಿನೇಶ್ ಗುಂಡೂರಾವ್ ಮತ್ತು ಡಿ.ಕೆ. ಸಹೋದರರ (ಡಿ.ಕೆ. ಶಿವಕುಮಾರ್‌ ಮತ್ತು ಡಿ.ಕೆ. ಸುರೇಶ್‌) ಪ್ರಭಾವ ಬಳಸಿಕೊಂಡು, ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಓಟಕ್ಕೆ ತಡೆ ಒಡ್ಡಬಹುದೆಂಬ ಲೆಕ್ಕಾಚಾರ ಕಾಂಗ್ರೆಸ್‌ ನಾಯಕರದ್ದು ಎನ್ನಲಾಗಿದೆ.

ರಾಜ್ಯ ರಾಜಕಾರಣದಲ್ಲೇ ಮುಂದುವರಿಕೆ: ಈ ಮಧ್ಯೆ, ರಾಜ್ಯ ರಾಜಕಾರಣದಲ್ಲೇ ಮುಂದುವರೆಯುವಂತೆ ಕೃಷ್ಣ ಬೈರೇಗೌಡ ಮತ್ತು ದಿನೇಶ್ ಗುಂಡೂರಾವ್ ಅವರಿಗೆ ಹೈಕಮಾಂಡ್ ‌ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕೃಷ್ಣ ಬೈರೇಗೌಡ ಅವರ ಹೆಸರು ಪ್ರಸ್ತಾಪವಾಗಿತ್ತು. ಈ ಹೊತ್ತಿನಲ್ಲೇ ಹೈಕಮಾಂಡ್ ನಾಯಕರು ಈ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

‘ಕಂದಾಯ ಹಾಗೂ ಆರೋಗ್ಯ ಇಲಾಖೆಯ ಕಾರ್ಯವೈಖರಿ ಉತ್ತಮವಾಗಿದೆ. ಇಬ್ಬರೂ ಸಚಿವರೂ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಬೇಡ. ಸಚಿವರಾಗಿಯೇ ಕೆಲಸ ಮಾಡಿಕೊಂಡು ಹೋಗುವಂತೆ ಹೈಕಮಾಂಡ್ ಇಬ್ಬರಿಗೂ ತಿಳಿಸಿದೆ’ ಎಂದು ಮೂಲಗಳು ಹೇಳಿವೆ.

ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಉದ್ದೇಶದಿಂದ ರಾಜ್ಯಕ್ಕೆ ಬಂದಿರುವ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಕೃಷ್ಣ ಬೈರೇಗೌಡ ಮತ್ತು ದಿನೇಶ್‌ ಗುಂಡೂರಾವ್‌ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ‌ಈ ಸಂದರ್ಭದಲ್ಲಿ ಉಭಯ ಸಚಿವರಿಗೆ ರಾಜ್ಯ ರಾಜಕಾರಣದಲ್ಲಿ ಮುಂದುವರೆಯುವಂತೆ ಸುರ್ಜೇವಾಲ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT