ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಗುರುವಾರ ಎರಡು ತಾಸು ವಿಚಾರಣೆ
ನಡೆಸಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಶಿವಕುಮಾರ್ ಅವರಿಗೆ ಸಮನ್ಸ್ ನೀಡಿದ್ದರು. ಅದರಂತೆ ನಗರದಲ್ಲಿನ ಲೋಕಾ
ಯುಕ್ತ ಕಚೇರಿಗೆ ಅವರು ಗುರುವಾರ ಮಧ್ಯಾಹ್ನ ಬಂದಿದ್ದರು. ಲೋಕಾಯುಕ್ತ ಎಸ್‌ಪಿ ಕೆ.ವಂಶಿಕೃಷ್ಣ ಮತ್ತು ಡಿವೈಎಸ್‌ಪಿ ಸತೀಶ್ ಎಂ.ಎಚ್. ಅವರ ತಂಡವು ವಿಚಾರಣೆ ನಡೆಸಿದೆ ಎಂದು ಲೋಕಾಯುಕ್ತ ಮೂಲಗಳು ಹೇಳಿವೆ. ‘ಮಧ್ಯಾಹ್ನ 2.15ರಿಂದ 4.15ರವರೆಗೆ ವಿಚಾರಣೆ ನಡೆಸಲಾಗಿದೆ. ಆದಾಯ ಮತ್ತು ಆಸ್ತಿಗೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಹಾಗೂ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ’ ಎಂದು ಮೂಲಗಳು ಹೇಳಿವೆ.
ವಿಚಾರಣೆ ಮುಗಿಸಿ ಹೊರಬಂದ ಶಿವಕುಮಾರ್, ‘ಬುಧವಾರ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಆಲಮಟ್ಟಿ ಅಣೆಕಟ್ಟೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವಿದ್ದ ಕಾರಣ ಗುರುವಾರ ಹಾಜರಾಗುತ್ತೇನೆ ಎಂದು ಮನವಿ ಮಾಡಿಕೊಂಡಿದ್ದೆ. ಅದರಂತೆ ವಿಚಾರಣೆಗೆ ಬಂದಿದ್ದೆ. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ. ಒಂದಷ್ಟು ವಿಚಾರಗಳಲ್ಲಿ ಸ್ಪಷ್ಟನೆ ಕೇಳಿದ್ದಾರೆ. ನನ್ನ ಬಳಿ ಇರುವ ದಾಖಲೆಗಳನ್ನು ಸಲ್ಲಿಸುತ್ತೇನೆ’
ಎಂದರು.
ಶಿವಕುಮಾರ್ ವಿರುದ್ಧ 2017ರಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಈಗಿನ ಕಾಂಗ್ರೆಸ್ ಸರ್ಕಾರವು ವಾಪಸ್ ಪಡೆದುಕೊಂಡಿತ್ತು. ಪ್ರಕರಣದ ತನಿಖೆಯನ್ನು ನಡೆಸುವಂತೆ ಲೋಕಾಯುಕ್ತಕ್ಕೆ ಸೂಚಿಸಿತ್ತು. ಪ್ರಕರಣದಲ್ಲಿ ಶಿವಕುಮಾರ್ ಅವರನ್ನು ಲೋಕಾಯುಕ್ತ ವಿಚಾರಣೆಗೆ ಒಳಪಡಿಸಿದ್ದು ಇದೇ ಮೊದಲು.
‘ಸಿಬಿಐ ಅಧಿಕಾರಿಗಳೇ ಪರವಾಗಿಲ್ಲ’
‘ಸಿಬಿಐನವರೇ ಪ್ರಶ್ನೆ ಕೇಳಲಿಲ್ಲ ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ. ಆದರೆ ಲೋಕಾಯುಕ್ತದವರು ವಿಚಿತ್ರ ಪ್ರಶ್ನೆಗಳನ್ನು ಕೇಳಿ ಹಿಂಸೆ ಕೊಡುತ್ತಿದ್ದಾರೆ. ಇವರಿಗಿಂತ ಸಿಬಿಐನವರೇ ಪರವಾಗಿಲ್ಲ’ ಎಂದು ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು ‘ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐ ತನಿಖೆ ನಿಲ್ಲಿಸಿಲ್ಲ. ನನ್ನ ಕುಟುಂಬ ಮತ್ತು ಸ್ನೇಹಿತರಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಸಿಬಿಐ ಕಿರುಕುಳ ನೀಡುತ್ತಿದೆ. ಲೋಕಾಯುಕ್ತವೂ ಇದೇ ಕೆಲಸ ಮಾಡುತ್ತಿದೆ’ ಎಂದು ಹೇಳಿದ್ದಾರೆ.
ಪ್ರಿಯಾಂಕ್ ಖರ್ಗೆ ವಿರುದ್ಧದ ವಿಚಾರಣೆಗೆ ತಡೆ
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಅಂದು ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. ‘ನನ್ನ ವಿರುದ್ಧದ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಪ್ರಿಯಾಂಕ್ ಖರ್ಗೆ ಸಲ್ಲಿಸಿದ್ದ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದರು. ಸಚಿವ ಪ್ರಿಯಾಂಕ್ ಪರ ಹಾಜರಾಗಿದ್ದ ಹಿರಿಯ ವಕೀಲ ಸಂದೇಶ್ ಜೆ.ಚೌಟ ‘ಪ್ರಕರಣದ ಸಹ ಆರೋಪಿಗಳು ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಮತ್ತೊಂದು ಪೀಠ 2024ರ ಮೇ 7ರಂದು ವಜಾಗೊಳಿಸಿದೆ. ಸಹ ಆರೋಪಿಗಳಿಗೆ ₹10 ಸಾವಿರ ದಂಡ ಸಹ ವಿಧಿಸಲಾಗಿತ್ತು’ ಎಂದರು. ‘ಹೈಕೋರ್ಟ್ ನೀಡಿದ್ದ ಈ ಆದೇಶವನ್ನು ಪ್ರಶ್ನಿಸಿ ಸಹ ಆರೋಪಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಈಗಾಗಲೇ ತಡೆ ನೀಡಿದೆ. ಆದ್ದರಿಂದ ಪ್ರಿಯಾಂಕ್ ಖರ್ಗೆ ವಿರುದ್ಧದ ವಿಚಾರಣೆಗೂ ತಡೆ ನೀಡಬೇಕು’ ಎಂದು ಕೋರಿದರು. ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ ತಡೆ ಆದೇಶ ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.