ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾನೂನು ಹೋರಾಟ ಮುಂದುವರಿಸುವೆ: ಡಿ.ಕೆ.ಶಿವಕುಮಾರ್

Published : 14 ಫೆಬ್ರುವರಿ 2024, 0:27 IST
Last Updated : 14 ಫೆಬ್ರುವರಿ 2024, 0:27 IST
ಫಾಲೋ ಮಾಡಿ
Comments

ಬೆಂಗಳೂರು: ‘ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ’ ಎಂದು ಉಪಮುಖ್ಯಮಂತ್ರಿ‌ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಪ್ರಕರಣವನ್ನು ಸಿಬಿಐಗೆ ನೀಡಲು ಆಗುವುದಿಲ್ಲ ಎಂದು ಅಂದಿನ ಅಡ್ವೊಕೇಟ್ ಜನರಲ್ ಹೇಳಿದ್ದರು. ಅದರ ದಾಖಲೆಯನ್ನು ನಾನು ಮಾಹಿತಿ ಹಕ್ಕು ಮೂಲಕ ಪಡೆದಿದ್ದೇನೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದೇ ತಪ್ಪು. ಹೀಗಾಗಿ ನಮ್ಮ ಸರ್ಕಾರ ಅನುಮತಿ ವಾಪಸ್ ಪಡೆದು ಲೋಕಾಯುಕ್ತಕ್ಕೆ ವಹಿಸಿದೆ’ ಎಂದರು.

‘ಸರ್ಕಾರ ನನ್ನ ವಿರುದ್ಧದ ತನಿಖೆಯ ಅನುಮತಿ ಹಿಂಪಡೆದ ನಂತರವೂ ಸಿಬಿಐನವರು ನನ್ನ ಸಂಸ್ಥೆಗಳು ಹಾಗೂ ನನ್ನ ಜತೆ ವ್ಯವಹಾರ ಮಾಡಿರುವವರಿಗೆ ನೂರಾರು ನೋಟಿಸ್ ನೀಡುತ್ತಿದ್ದಾರೆ. ಯಾಕೆ ನೊಟೀಸ್‌ ನೀಡುತ್ತಿದ್ದಾರೋ ಗೊತ್ತಿಲ್ಲ’ ಎಂದೂ ಹೇಳಿದರು.

ಹೈಕೋರ್ಟ್‌ನಲ್ಲಿ ಪ್ರಕರಣ

ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದ ಆರೋಪದಡಿ ಡಿ.ಕೆ. ಶಿವಕುಮಾರ್‌ ವಿರುದ್ಧ ದಾಖಲಿಸಿದ್ದ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಪೊಲೀಸ್‌ ವಿಭಾಗದ ವರ್ಗಾಯಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ರಿಟ್‌ ಅರ್ಜಿ ಹೈಕೋರ್ಟ್‌ನಲ್ಲಿ ಬಾಕಿ ಇದೆ.

ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕೂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಎರಡೂ ಅರ್ಜಿಗಳ ವಿಚಾರಣೆಗೆ ನ್ಯಾಯಮೂರ್ತಿ ಕೆ. ಸೋಮಶೇಖರ್‌ ನೇತೃತ್ವದ ವಿಭಾಗೀಯ ಪೀಠದಲ್ಲಿ ಸೋಮವಾರ ನಡೆದಿತ್ತು. ಮುಂದಿನ ವಿಚಾರಣೆ ಫೆ. 29ಕ್ಕೆ ನಿಗದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT