ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ಗೆ ಮಾದಿಗ ಸಮುದಾಯದ ಬೆಂಬಲ: ಹನುಮಂತಯ್ಯ

Published 2 ಏಪ್ರಿಲ್ 2024, 18:57 IST
Last Updated 2 ಏಪ್ರಿಲ್ 2024, 18:57 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆ ಮಾಜಿ ಸದಸ್ಯ ಎಲ್‌. ಹನುಮಂತಯ್ಯ (ಪರಿಶಿಷ್ಟ ಜಾತಿ ಎಡಗೈ) ಅವರಿಗೆ ಕೊನೆಕ್ಷಣದಲ್ಲಿ ಕೋಲಾರ ಕ್ಷೇತ್ರದ ಟಿಕೆಟ್‌ ಕೈತಪ್ಪಿದರೂ, ಒಟ್ಟು ಸಮುದಾಯದ ಹಿತದೃಷ್ಟಿಯಿಂದ ಕೋಲಾರವೂ ಸೇರಿದಂತೆ ಎಲ್ಲ ಕಡೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಬೆಂಬಲಿಸಲು ಕರ್ನಾಟಕ ಮಾದಿಗ ಸಮುದಾಯದ ಮುಖಂಡರು ನಿರ್ಧರಿಸಿದ್ದಾರೆ.

ಕಬ್ಬನ್ ಪಾರ್ಕ್‌ನಲ್ಲಿರುವ ಟೆನಿಸ್ ಅಸೋಸಿಯೇಶನ್ ಸಭಾಂಗಣದಲ್ಲಿ ಎಲ್‌. ಹನುಮಂತಯ್ಯ ಅವರ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ ಮಂಗಳವಾರ ನಡೆಯಿತು. ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ವಿಧಾನಸಭೆಯಿಂದ ರಾಜ್ಯಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಒಕ್ಕಲಿಗ ಮತ್ತು ಅಲ್ಪಸಂಖ್ಯಾತರಿಗೆ ಮತ್ತೆ ಅವಕಾಶ ನೀಡಿದ ಕಾಂಗ್ರೆಸ್‌ ಪಕ್ಷ, ಪರಿಶಿಷ್ಟ ಜಾತಿಯಲ್ಲಿ ಪ್ರತಿಭಾವಂತರಾದ ಹನುಮಂತಯ್ಯ ಅವರಿಗೆ ಟಿಕೆಟ್‌ ನಿರಾಕರಿಸಲು ಕಾರಣವೇನು? ಅವರೇನು ತಪ್ಪು ಮಾಡಿದ್ದಾರೆ ಎನ್ನುವುದಕ್ಕೆ ಕಾಂಗ್ರೆಸ್‌ ನಾಯಕರು ಉತ್ತರ ನೀಡಬೇಕು ಎಂದು ಸಭೆಯಲ್ಲಿ ಆಗ್ರಹ ವ್ಯಕ್ತವಾಯಿತು.

‘ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ವಿಷಯ ಬಂದಾಗ ನನ್ನ ಹೆಸರು ಮುಂಚೂಣಿಗೆ ಬಂದಿತ್ತು. ಟಿಕೆಟ್‌ ಪಡೆದುಕೊಳ್ಳಲು ಪ್ರಯತ್ನವೂ ನಡೆದಿತ್ತು. ಆದರೂ ಬೇರೊಬ್ಬರಿಗೆ ಟಿಕೆಟ್‌ ನೀಡಲಾಗಿದೆ. ಪರಿಶಿಷ್ಟ ಜಾತಿ ಅದರಲ್ಲೂ ಮಾದಿಗ ಸಮುದಾಯದಲ್ಲಿರುವ ಪ್ರತಿಭಾವಂತರನ್ನು ಈ ರೀತಿ ಕಾಂಗ್ರೆಸ್ ನಿರ್ಲಕ್ಷಿಸುವುದು ಸರಿಯಲ್ಲ ಎಂದು ಸಭೆಯಲ್ಲಿ ಚರ್ಚೆ ನಡೆಯಿತು. ಕಾಂಗ್ರೆಸ್‌ನಿಂದ ಆಗಿರುವ ತಾರತಮ್ಯ, ಅನ್ಯಾಯದ ಮಧ್ಯೆಯೂ, ಸಮುದಾಯದ ಮತಗಳು ಇತರ ಪಕ್ಷಗಳಿಗೆ ಚದುರಿ ಹೋಗದೆ ಕಾಂಗ್ರೆಸ್‌ನ್ನು ಬೆಂಬಲಿಸಬೇಕು ಎಂದು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ಎಲ್‌. ಹನುಮಂತಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT