ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ: ಪ್ರತಿಭಟನೆಗಷ್ಟೇ ಸೀಮಿತ

Last Updated 5 ಡಿಸೆಂಬರ್ 2020, 13:50 IST
ಅಕ್ಷರ ಗಾತ್ರ

ಬೆಂಗಳೂರು:ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವೆಡೆ ಕನ್ನಡಪರ ಸಂಘಟನೆಗಳ ಪ್ರತಿಭಟನೆ, ಮೆರವಣಿಗೆ ಬಿಟ್ಟರೆ ಉಳಿದಂತೆ ರಾಜ್ಯದಾದ್ಯಂತ ಕೆಎಸ್‌ಆರ್‌ಟಿಸಿ, ಬೆಂಗಳೂರಿನಲ್ಲಿ ಬಿಎಂಟಿಸಿ, ಮೆಟ್ರೋ ಸಂಚಾರ ಎಂದಿನಂತೆ ಇತ್ತು.

ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ–ವಹಿವಾಟು ಸಹ ಸಾಮಾನ್ಯವಾಗಿತ್ತು. ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.

'ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಬ್ಬ ಹಿಟ್ಲರ್. ಅವರು ಮರಾಠರ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ' ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ದೂರಿದರು. 'ಕನ್ನಡ ಪರ ಹೋರಾಟಗಾರರನ್ನು ಬಂಧಿಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಪೊಲೀಸ್ ಬಲ ಬಳಸಿ ಸುಮಾರು 30 ಸಾವಿರ ಕನ್ನಡಪರ ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಧಿಕಾರ ರದ್ದು ಮಾಡುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ' ಎಂದರು.

ವಾಟಾಳ್ ನಾಗರಾಜ, ಸಾ.ರಾ. ಗೋವಿಂದ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ಟೌನ್ ಹಾಲ್ ಬಳಿ ವಶಕ್ಕೆ ಪಡೆದರು. ಪ್ರತಿಭಟನಕಾರರಿಗಿಂತ ಪೊಲೀಸರ ಸಂಖ್ಯೆಯೇ ಹೆಚ್ಚಿತ್ತು.

ಬೆಳಗಾವಿಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಗಾಂಧಿ ಭವನದಲ್ಲಿ ನಡೆಯುತ್ತಿದ್ದ ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ವಿಜಯಪುರದಲ್ಲಿ ಕರ್ನಾಟಕ ಬಂದ್ ಸಂಪೂರ್ಣ ವಿಫಲವಾಯಿತು. ಎಂದಿನಂತೆ ವ್ಯಾಪಾರ, ವಹಿವಾಟು ನಡೆಯಿತು. ವಾಹನಗಳ ಸಂಚಾರವೂ ಎಂದಿನಂತೆ ಇತ್ತು. ಅಂಗಡಿ, ಮಳಿಗೆಗಳು ಬಾಗಿಲು ತೆರೆದಿದ್ದವು. ಜನ ಸಂಚಾರವೂ ಎಂದಿನಂತೆ ಇತ್ತು. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಮತ್ತು ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ನಗರದ ಅಂಬೇಡ್ಕರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತ್ಯೇಕ ವಾಗಿ ಪ್ರತಿಭಟನೆ ನಡೆಸಿದರು.

ಕಲಬುರಗಿಯಲ್ಲಿ ಮರಾಠಾ ಅಭಿವೃದ್ಧಿ ನಿಗಮ ಘೋಷಣೆ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ 35 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಧಿಕ್ಕಾರ ಕೂಗಿದರು

ಕೋಲಾರದಲ್ಲಿಕನ್ನಡಪರ ಸಂಘಟನೆಗಳು, ರೈತ ಸಂಘ ಮತ್ತು ಹಸಿರು ಸೇನೆ ಹೊರತುಪಡಿಸಿ ಬೇರೆ ಸಂಘಟನೆಗಳ ಸದಸ್ಯರು ಹಾಗೂ ಜನರು ಬಂದ್‌ಗೆ ಬೆಂಬಲ ಸೂಚಿಸಲಿಲ್ಲ. ಕೆಲ ಸಂಘಟನೆಗಳ ಸದಸ್ಯರು ಪ್ರತಿಭಟನೆ ಮಾಡಿದ್ದನ್ನು ಹೊರತುಪಡಿಸಿದರೆ ಎಲ್ಲಿಯೂ ಬಂದ್‌ನ ಛಾಯೆ ಇರಲಿಲ್ಲ.

ವಾಣಿಜ್ಯ ವಹಿವಾಟು ಹಾಗೂ ವಾಹನ ಸಂಚಾರ ಎಂದಿನಂತೆಯೇ ಇತ್ತು. ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು, ಆಟೊಗಳು ಪ್ರತಿನಿತ್ಯದಂತೆ ರಸ್ತೆಗಿಳಿದವು. ಹೀಗಾಗಿ ಜನಜೀವನಕ್ಕೆ ತೊಂದರೆಯಾಗಲಿಲ್ಲ. ಕೆಎಸ್‌ಆರ್‌ಟಿಸಿ ಮತ್ತು ಹಳೆ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ದೊಡ್ಡ ದಂಡೇ ಕಂಡುಬಂತು.

ಚಾಮರಾಜನಗರ ಸೇರಿದಂತೆ ಜಿಲ್ಲೆಯಾದ್ಯಂತ ಜನಜೀವನ ಎಂದಿನಂತೆಇತ್ತು. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜನರ ಸಂಚಾರ ಸ್ವಲ್ಪ ಕಡಿಮೆ ಇತ್ತು. ಬೆರಳೆಣಿಕೆಯಷ್ಟು ಅಂಗಡಿಗಳನ್ನು ಬಿಟ್ಟರೆ, ಬಹುತೇಕ ಎಲ್ಲ ಮಳಿಗೆಗಳು ತೆರೆದಿದ್ದವು. ಹೋಟೆಲ್‌ಗಳು ಕೂಡ ಕಾರ್ಯಾಚರಿಸಿದವು. ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ತೊಂದರೆಯಾಗಲಿಲ್ಲ. ಶನಿವಾರ ಆದ ಕಾರಣ ಸಿಬ್ಬಂದಿ ಸಂಖ್ಯೆ ಕಡಿಮೆ ಇತ್ತು. ಬಂದ್‌ ಎಂಬ ಕಾರಣಕ್ಕೆ ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲಾಡಳಿತ ಭವನದತ್ತ ಸುಳಿಯಲಿಲ್ಲ.

ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳ ಸಂಚಾರ ಎಂದಿನಂತೆ ಇತ್ತು. ಆಟೊಗಳ ಓಡಾಟವೂ ಸಾಮಾನ್ಯವಾಗಿತ್ತು. ಹಾಗಾಗಿ, ಜನರ ಸಂಚಾರಕ್ಕೆ ಏನೂ ತೊಂದರೆಯಾಗಲಿಲ್ಲ.

ಮಂಡ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ರಚನೆ ಕೈಬಿಡಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ರಾಮನಗರದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಸಂಘಟನೆಯ ಅಧ್ಯಕ್ಷ ರಮೇಶ್‌ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಕನ್ನಡಪರ ಸಂಘಟನೆಗಳ ಬಗ್ಗೆ ಅವಹೇಳನಕಾರಿ ಮಾತನ್ನಾಡಿದ ಶಾಸಕ ಬಸವನಗೌಡ ಪಾಟೀಲ ಯತ್ನಾಳರ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹನ ಮಾಡಿದರು.

ಶಿವಮೊಗ್ಗದಲ್ಲೂ ಬಂದ್ ವಿಫಲವಾಗಿದೆ. ಹಾಲು, ದಿನಸಿ, ತರಕಾರಿ ಸೇರಿ ಅಗತ್ಯ ವಸ್ತುಗಳ ಖರೀದಿ, ವಾಕಿಂಗ್, ಜಾಗಿಂಗ್‍ಗೆ ಜನರು ರಸ್ತೆಗಿಳಿದಿದ್ದರು. ಎರಡು ದಿನದಿಂದ ಸ್ಥಗಿತವಾಗಿದ್ದ ಖಾಸಗಿ ಬಸ್ ಸಂಚಾರ ಪುನಾರಂಭವಾಗಿದ್ದು, ದೂರದ ಊರಿಗೆ ತೆರಳಲು ಜನರು ಬಸ್ ನಿಲ್ದಾಣಕ್ಕೆ ಬರುತ್ತಿದ್ದಾರೆ. ಕೆಎಸ್‍ಆರ್‌ಟಿಸಿ ಬಸ್ ಸಂಚಾರವು ಸಾಮಾನ್ಯ ಸ್ಥಿತಿಗೆ ಬಂದಿದೆ.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಅಲ್ಲಿಯ ಅಂಗಡಿಗಳನ್ನು ಅವರು ಬಲವಂತವಾಗಿ ಮುಚ್ಚಿಸಲು ಮುಂದಾದಾಗ ಪೊಲೀಸರು 15ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ಹಳೆ ಸಿಎಆರ್ ಮೈದಾನಕ್ಕೆ ಕರೆದೊಯ್ದರು.

ರಾಮನಗರದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟವು ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ವಿವಿಧ ಸಂಘಟನೆಗಳು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದವು.

ಕಾರವಾರದಲ್ಲಿ ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿ ಜನಜೀವನ ಎಂದಿನಂತೆ ಸಾಗಿತು.

ಉಳಿದಂತೆ ಮೈಸೂರು, ಮಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಬಂದ್ ಯಾವುದೇ ಪರಿಣಾಮ ಬೀರಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT