ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ: ಗೋವಾದ ವಿಶೇಷ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

Published 10 ಜುಲೈ 2023, 16:23 IST
Last Updated 10 ಜುಲೈ 2023, 16:23 IST
ಅಕ್ಷರ ಗಾತ್ರ

ನವದೆಹಲಿ: ಮಹದಾಯಿ ನ್ಯಾಯಾಧೀಕರಣದ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ ಒಪ್ಪಿಗೆ ನೀಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ಬೇಲಾ ಎಂ.ತ್ರಿವೇದಿ ಅವರನ್ನು ಒಳಗೊಂಡ ಪೀಠವು, ವನ್ಯಜೀವಿ ವಾರ್ಡನ್‌ ಅವರ ಆದೇಶದ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿತು. ನಾಲ್ಕು ವಾರಗಳೊಳಗೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಿತು. ನವೆಂಬರ್‌ 28ರಂದು ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿತು. 

ಮಹದಾಯಿ ಜಲ ವಿವಾದದ ನ್ಯಾಯಮಂಡಳಿಯು 2018 ಆಗಸ್ಟ್‌ 14ರಂದು ನೀಡಿದ್ದ ತೀರ್ಪು ಪ್ರಶ್ನಿಸಿ ಗೋವಾ ಹಾಗೂ ಕರ್ನಾಟಕ ರಾಜ್ಯಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ನ್ಯಾಯಾಧೀಕರಣವು ಮೂರು ರಾಜ್ಯಗಳಿಗೆ 13.42 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿತ್ತು. ಕರ್ನಾಟಕದ ಕಳಸಾ– ಬಂಡೂರಿ ಯೋಜನೆಗೆ 3.80 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿತ್ತು. ‘ಗೋವಾ ಸರ್ಕಾರವು 2019ರಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಅದರ ವಿಚಾರಣೆಗೆ ನ್ಯಾಯಾಲಯ ಒಪ್ಪಿದೆ. ಇದೊಂದು ಉತ್ತಮ ಬೆಳವಣಿಗೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಪ್ರತಿಕ್ರಿಯಿಸಿದ್ದಾರೆ.  

‘ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಗೆ ಸಹ ಸುಪ್ರೀಂ ಕೋರ್ಟ್‌ ಒಪ್ಪಿಗೆ ನೀಡಿದೆ’ ಎಂದು ರಾಜ್ಯದ ಪರ ವಕೀಲ ಮೋಹನ್‌ ಕಾತರಕಿ ತಿಳಿಸಿದರು. 

ಕಳಸಾ–ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿರುವುದನ್ನು ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಈ ಯೋಜನೆಗೆ ತಡೆಯಾಜ್ಞೆ ನೀಡಬೇಕು ಎಂದೂ ಗೋವಾ ಕೋರಿತ್ತು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT