ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

₹23 ಸಾವಿರ ಕೋಟಿಗೂ ಹೆಚ್ಚಿನ ಬಂಡವಾಳ ನಿರೀಕ್ಷೆ: ಎಂ.ಬಿ. ಪಾಟೀಲ

ದಾವೋಸ್‌ನಲ್ಲಿ ಹಲವು ಕಂಪನಿಗಳ ಜೊತೆ ಒಪ್ಪಂದ
Published 24 ಜನವರಿ 2024, 14:18 IST
Last Updated 24 ಜನವರಿ 2024, 14:18 IST
ಅಕ್ಷರ ಗಾತ್ರ

ಬೆಂಗಳೂರು: ‘ಸ್ವಿಟ್ಜರ್ಲೆಂಡ್‌ನ ದಾವೋಸ್‌ ನಗರದಲ್ಲಿ ನಡೆದ ವಿಶ್ವ ಆರ್ಥಿಕ ಸಮಾವೇಶದಲ್ಲಿ ಹಲವು ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಒಪ್ಪಂದಗಳಿಂದ ರಾಜ್ಯಕ್ಕೆ ₹ 23 ಸಾವಿರ ಕೋಟಿಗೂ ಹೆಚ್ಚಿನ ಬಂಡವಾಳ ಹರಿದು ಬರುವ ನಿರೀಕ್ಷೆಯಿದೆ’ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ತಮ್ಮ ನೇತೃತ್ವದ ನಿಯೋಗ ಕೈಗೊಂಡ ದಾವೋಸ್ ಪ್ರವಾಸದ ಕುರಿತು ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾಹಿತಿ ನೀಡಿದ ಅವರು, ‘ನೆಸ್ಲೆ, ಎಚ್‌ಪಿ, ಎಚ್‌ಸಿಎಲ್‌, ವೋಲ್ವೊ ಗ್ರೂಪ್‌, ಐಕಿಯಾ, ಸೋನಿ, ಮೈಕ್ರೊಸಾಫ್ಟ್‌, ಹಿಟಾಚಿ ಮತ್ತಿತರ ಉದ್ಯಮ ಸಂಸ್ಥೆಗಳ ಪ್ರಮುಖರ ಜೊತೆ 50ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಾಗಿದೆ’ ಎಂದರು.

‘ಬೆಂಗಳೂರಿನಲ್ಲಿ 100 ಮೆಗಾವಾಟ್ ಸಾಮರ್ಥ್ಯದ ಬೃಹತ್‌ ಗಾತ್ರದ ಡೇಟಾ ಸೆಂಟರ್ ಸ್ಥಾಪಿಸಲು ವೆಬ್ ವರ್ಕ್ಸ್ ಕಂಪನಿ ₹ 20 ಸಾವಿರ ಕೋಟಿ ಬಂಡವಾಳ ಹೂಡಲು ಮುಂದಾಗಿದೆ. ಇದರಿಂದ ಒಂದು ಸಾವಿರ ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಡಿಜಿಟಲ್ ಕೌಶಲ ವೃದ್ಧಿ ಪ್ರಕ್ರಿಯೆ ಹಮ್ಮಿಕೊಳ್ಳುವುದಾಗಿ ಮೈಕ್ರೊಸಾಫ್ಟ್ ಹೇಳಿದೆ. ಗ್ರಾಮೀಣ ಪ್ರದೇಶ ಕೇಂದ್ರೀತ ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಹಿಟಾಚಿ ಕಂಪನಿಯು ಒಪ್ಪಂದಕ್ಕೆ ಸಹಿ ಹಾಕಿದೆ’ ಎಂದು ಹೇಳಿದರು.

‘ಉತ್ತರ ಕರ್ನಾಟಕ ಭಾಗದಲ್ಲಿಯೂ ಉದ್ದಿಮೆಗಳನ್ನು ಆರಂಭಿಸಲು ಕಂಪನಿಗಳು ಆಸಕ್ತಿ ತೋರಿಸಿವೆ. ವಿಜಯಪುರ, ಹುಬ್ಬಳ್ಳಿ – ಧಾರವಾಡ, ಬೆಳಗಾವಿ ಮತ್ತಿತರ ಸ್ಥಳಗಳಲ್ಲಿ ಕೈಗಾರಿಕೆಗಳ ಸಮಾನ ಅಭಿವೃದ್ಧಿಗೆ ಕೊಡುಗೆ ನೀಡುವ ಹಲವು ಯೋಜನೆಗಳನ್ನು ಕಂಪನಿಗಳು ಹಮ್ಮಿಕೊಳ್ಳಲಿವೆ’ ಎಂದರು.

‘ವಿಜಯಪುರದಲ್ಲಿ ₹ 300 ಕೋಟಿ ವೆಚ್ಚದಲ್ಲಿ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸಲು ಲುಲು ಸಮೂಹ ಮುಂದಾಗಿದೆ. ಬಿಎಲ್‌ ಅಗ್ರೊ ಕಂಪನಿಯು ಸುಸಜ್ಜಿತ ಆಹಾರ ಸಂಸ್ಕರಣಾ ಘಟಕ ಆರಂಭಿಸಲಿದೆ’ ಎಂದರು.

‘ಸ್ಮಾರ್ಟ್ ಸಿಟಿ ಮೂಲಸೌಲಭ್ಯ, ನವೀಕರಿಸಬಹುದಾದ ಇಂಧನ ಪರಿಹಾರಗಳು, ಡೇಟಾ ಕೇಂದ್ರಗಳು ಮತ್ತು ಸಂಬಂಧಿತ ವಲಯಗಳಲ್ಲಿ ವಿವಿಧ ಕಂಪನಿಗಳಿಂದ ₹ 3 ಸಾವಿರ ಕೋಟಿ ಬಂಡವಾಳ ಹೂಡಿಕೆಯ ನಿರೀಕ್ಷೆಯಿದೆ. ಎಬಿ ಇನ್‌ಬೇವ್‌ ಇಂಡಿಯಾ ಕಂಪನಿಯು ಮದ್ಯ ತಯಾರಿಕಾ ಘಟಕಗಳ ಸಾಮರ್ಥ್ಯ ಹೆಚ್ಚಿಸಲು ₹ 400 ಕೋಟಿ ಹೂಡಿಕೆಯ ಇಂಗಿತ ವ್ಯಕ್ತಪಡಿಸಿದೆ’ ಎಂದೂ ಸಚಿವರು ವಿವರಿಸಿದರು.

ದಾವೋಸ್‌ನಲ್ಲಿ ಆಗಿರುವ ಒಪ್ಪಂದಗಳನ್ನು ಕಾರ್ಯಗತಗೊಳಿಸಲು ಸರ್ಕಾರ ಗಮನ ಕೇಂದ್ರೀಕರಿಸಲಿದೆ. ಕಂಪನಿಗಳ ಅಗತ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುವುದು.
–ಎಂ.ಬಿ. ಪಾಟೀಲ ಕೈಗಾರಿಕಾ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT