ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೇಕೆದಾಟು ಅನುಷ್ಠಾನಕ್ಕೆ ಬಿಡಲ್ಲ: DMK ಪ್ರಣಾಳಿಕೆಗೆ 'ಕೈ' ಒಪ್ಪಿಗೆ ಇದೆಯೇ: BJP

Published 21 ಮಾರ್ಚ್ 2024, 11:37 IST
Last Updated 21 ಮಾರ್ಚ್ 2024, 11:37 IST
ಅಕ್ಷರ ಗಾತ್ರ

ಬೆಂಗಳೂರು: ‘ಇಂಡಿಯಾ ಒಕ್ಕೂಟ ಗೆದ್ದು ಬಂದರೆ ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ಬಿಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಹೇಳಿಕೆ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ ಪಕ್ಷವಾಗಲಿ, ರಾಜ್ಯ ಸರ್ಕಾರವಾಗಲಿ ತುಟಿ ಬಿಚ್ಚದೇ ಮೌನವಹಿಸಿದೆ. ಇದು ಸಮ್ಮತಿಯ ಸೂಚನೆಯೋ ’ ಎಂದು ಬಿಜೆಪಿ ಪ್ರಶ್ನಿಸಿದೆ.

ಕರ್ನಾಟಕ ಸರ್ಕಾರದ ದೌರ್ಬಲ್ಯವನ್ನು ಮನಗಂಡೇ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಈ ಅಂಶವನ್ನು ಸೇರಿಸಿದೆ ಎಂದು ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣಗೌಡ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ಕಾಂಗ್ರೆಸ್‌ ಪಕ್ಷವಾಗಲಿ, ರಾಜ್ಯ ಸರ್ಕಾರವಾಗಲಿ ಸ್ಟಾಲಿನ್‌ ಹೇಳಿಕೆಯ ಕುರಿತು ಬಾಯಿ ಬಿಡುತ್ತಿಲ್ಲ. ಮೇಕೆದಾಟು ಕುರಿತು ಡಿಎಂಕೆ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ಅಂಶದ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರ ನಿಲುವೇನು’ ಎಂದು ಅವರು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ದೌರ್ಬಲ್ಯವನ್ನು ನೋಡಿಯೇ ಡಿಎಂಕೆ ಈ ಸಾಹಸಕ್ಕೆ ಕೈ ಹಾಕಿದೆ. ಕಾಂಗ್ರೆಸ್‌ ಪಕ್ಷ ಚುನಾವಣಾ ಲಾಭಕ್ಕಾಗಿ ಕರ್ನಾಟಕಕ್ಕೆ ದ್ರೋಹ ಮಾಡಿದೆ ಎಂದು ಹೇಳಿದರು.

‘ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಗೆ ₹1 ಸಾವಿರ ಕೋಟಿಯನ್ನು ಮೀಸಲಿಟ್ಟು ಬದ್ಧತೆ ಪ್ರದರ್ಶಿಸಿತು. ಆದರೆ, ಕಾಂಗ್ರೆಸ್‌ ಪಕ್ಷ ಕೋವಿಡ್‌ ಸಂಕಷ್ಟದ ಕಾಲದಲ್ಲಿ ಜನರ ಆರೋಗ್ಯವನ್ನೂ ಕಡೆಗಣಿಸಿ, ‘ನನ್ನ ನೀರು ನನ್ನ ಹಕ್ಕು’ ಎಂಬ ಪಾದಯಾತ್ರೆ ನಡೆಸಿತು. ಈಗ ಡಿಎಂಕೆ ಪಕ್ಷದ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸುಮ್ಮನಿರುವುದನ್ನು ನೋಡಿದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಬಗ್ಗೆ ಸಂಶಯ ಮೂಡುತ್ತಿದೆ. ಕರ್ನಾಟಕದ ರೈತರ, ಕುಡಿಯುವ ನೀರಿನ ಪ್ರಶ್ನೆ ಇದು. ಈ ವಿಚಾರದಲ್ಲಿ ಮುಖ್ಯಮಂತ್ರಿಯವರು ತಕ್ಷಣವೇ ನಿಲುವು ವ್ಯಕ್ತಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT