ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪರಿಷತ್: ಎರಡು ಕ್ಷೇತ್ರದಲ್ಲಿ ಗೆದ್ದ ಜೆಡಿಎಸ್; ನಾಲ್ಕು ಕ್ಷೇತ್ರಗಳ ಫಲಿತಾಂಶ ಬಾಕಿ

Published 7 ಜೂನ್ 2024, 0:09 IST
Last Updated 7 ಜೂನ್ 2024, 0:09 IST
ಅಕ್ಷರ ಗಾತ್ರ

ಬೆಂಗಳೂರು: ಪದವೀಧರರ ಹಾಗೂ ಶಿಕ್ಷಕರ ತಲಾ ಮೂರು ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆದಿದ್ದ ಚುನಾವಣೆಯಲ್ಲಿ ಹಿಂದೆ ಗೆದ್ದಿದ್ದ ಎರಡು ಕ್ಷೇತ್ರಗಳನ್ನು ಉಳಿಸಿಕೊಳ್ಳುವಲ್ಲಿ ಜೆಡಿಎಸ್ ಸಫಲವಾಗಿದೆ.

ನಾಲ್ಕು ಕ್ಷೇತ್ರಗಳ ಮತ ಎಣಿಕೆ ಪತ್ರಿಕೆ ಮುದ್ರಣಕ್ಕೆ ಹೋಗುವವರೆಗೆ ಮುಂದುವರಿದಿದ್ದು ತಲಾ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.  

ಈಶಾನ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3ರಂದು ಮತದಾನ ನಡೆದಿತ್ತು. ಗುರುವಾರ ಮತ ಎಣಿಕೆ ನಡೆಯಿತು.

ಬಿಜೆಪಿ–ಜೆಡಿಎಸ್‌ ಮೈತ್ರಿಯಿಂದಾಗಿ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡಲಾಗಿತ್ತು. 2018ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದರು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಚುನಾವಣೆಗೆ ಕೆಲ ದಿನಗಳ ಮೊದಲು ಜೆಡಿಎಸ್‌ಗೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿದ್ದರು. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು.

ಜೆಡಿಎಸ್‌ ಅಭ್ಯರ್ಥಿ ಕೆ.ವಿವೇಕಾನಂದ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ. 4,622 ಮತಗಳ ಅಂತರದಿಂದ ಗೆದ್ದಿದ್ದಾರೆ. ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಕಾಂಗ್ರೆಸ್‌ನ ಮರಿತಿಬ್ಬೇಗೌಡ ಸೋಲನುಭವಿಸಿದ್ದಾರೆ. ಮರಿತಿಬ್ಬೇಗೌಡ ಪಕ್ಷ ತೊರೆದರೂ ತನ್ನ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ಜೆಡಿಎಸ್‌ ಯಶಸ್ವಿಯಾಗಿದೆ.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಧಾನಪರಿಷತ್‌ನ ಜೆಡಿಎಸ್‌ ಸದಸ್ಯ ಎಸ್‌.ಎಲ್‌. ಬೋಜೇಗೌಡ ಪುನರಾಯ್ಕೆ ಬಯಸಿ ಕಣಕ್ಕೆ ಇಳಿದಿದ್ದರು. ಅವರು ಕಾಂಗ್ರೆಸ್‌ ಅಭ್ಯರ್ಥಿ ಕೆ.ಕೆ. ಮಂಜುನಾಥ್‌ ವಿರುದ್ಧ 5,267 ಮತಗಳಿಂದ ಗೆಲುವು ಸಾಧಿಸಿದರು.  ಬೋಜೇಗೌಡ 9,829 ಮತ, ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್‌ 4,562 ಮತ ಪಡೆದರು.

ನೈರುತ್ಯ ಪದವೀಧರ ಕ್ಷೇತ್ರ ನಾಲ್ಕು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಐದು ಅವಧಿ ಬಿಜೆಪಿಯ ಡಿ.ಎಚ್‌. ಶಂಕರಮೂರ್ತಿ, ಒಂದು ಅವಧಿ ಆಯನೂರು ಮಂಜುನಾಥ್‌ ಗೆಲುವು ಕಂಡಿದ್ದರು. ಈ ಬಾರಿ ಬಿಜೆಪಿ ತೊರೆದ ಆಯನೂರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಬಿಜೆಪಿ ಡಾ.ಧನಂಜಯ ಸರ್ಜಿ ಅವರನ್ನು ಕಣಕ್ಕೆ ಇಳಿಸಿತ್ತು. ಎಲ್ಲ ಸುತ್ತುಗಳಲ್ಲೂ ಸರ್ಜಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಬಿಜೆಪಿಯ ಮತ್ತೊಂದು ಭದ್ರಕೋಟೆಯಾದ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ನಾಲ್ಕು ಬಾರಿ ಗೆಲುವು ಸಾಧಿಸಿದ್ದ ವೈ.ಎ.ನಾರಾಯಣಸ್ವಾಮಿ ಕಾಂಗ್ರೆಸ್‌ನ ಡಿ.ಟಿ. ಶ್ರೀನಿವಾಸ್‌ ಎದುರು ಹಿನ್ನಡೆ ಕಂಡಿದ್ದರೆ, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಮೋಜಿ ಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಮರನಾಥ ‌ಪಾಟೀಲ ಅವರು ಕಾಂಗ್ರೆಸ್‌ನ ವಿಧಾನ ಪರಿಷತ್‌ ಹಾಲಿ ಸದಸ್ಯ ಚಂದ್ರಶೇಖರ ಪಾಟೀಲ ಎದುರು ಮುನ್ನಡೆ ಸಾಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT