1980ರಲ್ಲಿ ಭದ್ರಾವತಿಯ ಎಂಪಿಎಂ ಕಾರ್ಖಾನೆಗೆ 40 ವರ್ಷಗಳ ಸೀಮಿತ ಅವಧಿಗೆ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಸೇರಿದ ಅರಣ್ಯ ಪ್ರದೇಶ ಗುತ್ತಿಗೆ ನೀಡಲಾಗಿತ್ತು. 2020ರಲ್ಲಿ ಗುತ್ತಿಗೆ ಅವಧಿ ಮುಗಿದಿತ್ತು. ಮತ್ತೆ 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ರಾಜ್ಯ ಸರ್ಕಾರ 2020ರಲ್ಲಿ ಒಪ್ಪಿಗೆ ನೀಡಿತ್ತು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅನುಮೋದನೆ ಪಡೆದಿರಲಿಲ್ಲ. ಬಳಿಕ ಪ್ರಸ್ತಾವವನ್ನು ಕೇಂದ್ರಕ್ಕೆ ಕಳುಹಿಸಲಾಗಿತ್ತು. ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಪರಿಸರ ಸಚಿವಾಲಯ ತರಕಾರು ಎತ್ತಿತ್ತು. ಕಾರ್ಖಾನೆ ಪರ ನಿಲುವು ತಳೆದ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಜತೆಗೆ, ಕಾರ್ಖಾನೆಯ ನಿರ್ವಹಣಾ ಯೋಜನೆಗೂ ಒಪ್ಪಿಗೆ ಕೊಟ್ಟಿರಲಿಲ್ಲ.