ಬೆಂಗಳೂರು: ‘ರಾಜ್ಯಪಾಲರಾಗಿದ್ದ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಅರ್ಜಿದಾರರು ಸಲ್ಲಿಸಿದ್ದ ಪ್ರಬಲ ದಾಖಲೆಗಳು ಕಾರಣ. ಆದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಯಡಿಯೂರಪ್ಪನವರು ಯಾಕೆ ರಾಜೀನಾಮೆ ನೀಡಬೇಕು ಎಂದು ಅಂದು ಪ್ರಶ್ನಿಸಿದ್ದ ನೀವು, ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
‘ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದಾಗ ಯಡಿಯೂರಪ್ಪ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ’ ಎಂದು ಆರ್. ಅಶೋಕ ಪ್ರಶ್ನಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ‘ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ 4ರಂದು. ಅದು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶ ಪರಿಶೀಲಿಸಿಕೊಂಡು ಮಾತನಾಡಿ’ ಎಂದು ಕುಟುಕಿದ್ದಾರೆ.
‘ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು’ ಎಂದೂ ಹೇಳಿದ್ದಾರೆ.
‘ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಯಡಿಯೂರಪ್ಪ ವಿರುದ್ಧದ ಎಲ್ಲ ಆರೋಪಗಳನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿತ್ತು. ಹೀಗಾಗಿ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ನ್ಯಾಯಯುತವಾಗಿತ್ತು. ಹೆಚ್ಚಿನ ಮಾಹಿತಿಗೆ ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ಮತ್ತೊಮ್ಮೆ ಓದಿಕೊಳ್ಳಿ’ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.