ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದಿದ್ದು, 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಮುಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದಾರೆ. ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ‘ ಎಂದಿದ್ದಾರೆ.
'ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ' ಎಂದೂ ಅವರು ಪ್ರಶ್ನಿಸಿದ್ದಾರೆ.
'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ 'ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ' ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಅವರು ಹೇಳಿದ್ದಾರೆ.
'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ. ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ ನಿವೇಶನಗಳನ್ನು ಹಿಂದಿರುಗಿಸುತ್ತೇನೆ ಎಂದು ಅಂದು ಆರ್ಭಟಿಸಿದ್ದ ಸಿದ್ದರಾಮಯ್ಯ ಅವರು ಇಂದು ಬೇಷರತ್ತಾಗಿ ಅವರ ಪತ್ನಿಯವರಿಂದ ನಿವೇಶನ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿದ್ದಾರೆ.
ಬಿಜೆಪಿ ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದರು, ನಿಮಗೆ ದೊರೆತ 14 ಅಕ್ರಮ ನಿವೇಶನಗಳು 5000 ಸಾವಿರಕ್ಕೂ ಹೆಚ್ಚು ನಿವೇಶನಗಳ ಲೂಟಿಕೋರತನಕ್ಕೆ ರಕ್ಷಣೆಯಾಗಿ ನಿಂತಿದೆ ಎಂದು ಆರೋಪಿಸಿ ನಾವು ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆಗೆ ಪರ್ಯಾಯ ಸಮಾವೇಶ ಆಯೋಜಿಸಿ ಭಂಡತನದ ಸಮರ್ಥನೆಗಿಳಿದರು. ಸಾಮಾಜಿಕ ಕಾರ್ಯಕರ್ತರ ನ್ಯಾಯಾಲಯದ ಹೋರಾಟಕ್ಕೆ ಅಸ್ತು ಎಂದ ಘನತೆವೆತ್ತ ರಾಜ್ಯಪಾಲರನ್ನು ಅವಹೇಳನ ಮಾಡಿದರು. ಅವರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಹೋರಾಟ ಮಾಡಿದರು.
ನ್ಯಾಯಾಲಯದಲ್ಲಿ ಜಯ ದೊರಕದ ಹಿನ್ನಲೆಯಲ್ಲಿ ಕಾನೂನಿನ ಕುಣಿಕೆ ಬಿಗಿತ ಹೆಚ್ಚಾದಂತೆ, ಸಿಬಿಐ–ಇಡಿ ತನಿಖೆಗಳ ನಿರೀಕ್ಷೆಯಿಂದ ಬೆದರಿದ ಮುಖ್ಯಮಂತ್ರಿಗಳು ಏಕಾಏಕಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿರುವುದು ಅವರು ಕಾನೂನು ಹೋರಾಟಕ್ಕೆ ಮುನ್ನವೇ ಶಸ್ತ್ರ ತ್ಯಜಿಸಿ ಶರಣಾಗತಿ ಪ್ರಕಟಿಸಿದಂತಾಗಿದೆ.
ಅಂದ ಮಾತ್ರಕ್ಕೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು, ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬಹುದು ಎಂದು ಅಂದುಕೊಂಡಿದ್ದರೆ ಅದು ಅವರ ಅಜ್ಞಾನವನ್ನು ಪ್ರತಿಬಿಂಬಿಸುತ್ತದೆ. ನೀವೇಶನಗಳನ್ನು ಹಿಂದಿರುಗಿಸಿ ತಪ್ಪೊಪ್ಪಿಕೊಂಡಂತೆ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಿದರೆ ಮರೆತು ಹೋಗಿರುವ ತಮ್ಮ ನೈತಿಕತೆ ಪ್ರಜ್ಞೆ ಪ್ರದರ್ಶಿಸಿದಂತಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.
"ರಾಜೀನಾಮೆಯೊಂದೇ ನಿಮಗೆ ಉಳಿದಿರುವ ದಾರಿ"
— Vijayendra Yediyurappa (@BYVijayendra) September 30, 2024
'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ.
“ಮುಖ್ಯಮಂತ್ರಿ ಮನೆಯವರು ಎಂದರೆ
ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ ನಿವೇಶನಗಳನ್ನು ಹಿಂದಿರುಗಿಸುತ್ತೇನೆ" ಎಂದು ಅಂದು ಆರ್ಭಟಿಸಿದ್ದ ಮಾನ್ಯ @siddaramaiah ನವರು ಇಂದು ಬೇಷರತ್ತಾಗಿ ಅವರ ಪತ್ನಿಯವರಿಂದ… pic.twitter.com/lpA6ymA1q0
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.