ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Muda Scam | ಬಿಜೆಪಿ– ಜೆಡಿಎಸ್‌ ಒಳ ಸಂಚು: ಸಿದ್ದರಾಮಯ್ಯ

Published : 24 ಸೆಪ್ಟೆಂಬರ್ 2024, 15:46 IST
Last Updated : 24 ಸೆಪ್ಟೆಂಬರ್ 2024, 15:46 IST
ಫಾಲೋ ಮಾಡಿ
Comments

ಬೆಂಗಳೂರು: ‘ಬಿಜೆಪಿ– ಜೆಡಿಎಸ್‌ನವರ ಸಂಚು, ಒಳ ಸಂಚು, ರಾಜಭವನ ದುರುಪಯೋಗಕ್ಕೆ ನಾನು ಹೆದರುವುದಿಲ್ಲ. ರಾಜ್ಯದ ಜನ, ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪು ಹೊರಬಿದ್ದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಸಂಪುಟ ಸಹೋದ್ಯೋಗಿಗಳ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.

‘ನಾವು ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದ ಬಳಿಕ ಬಿಜೆಪಿಯವರು ‘ಆಪರೇಷನ್ ಕಮಲ’ ಮಾಡಲು ಪ್ರಯತ್ನಿಸಿದರು.‌ ದುಡ್ಡು ಕೊಟ್ಟು ಶಾಸಕರನ್ನು ಖರೀದಿಸಲು ಯತ್ನಿಸಿದರು. ಆದರೆ, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಿದ್ದಿಲ್ಲ. ಹೀಗಾಗಿ, ಅವರ ಯತ್ನ ವಿಫಲವಾಯಿತು. ಬಡವರ ಪರವಾದ ನಮ್ಮ ಕಾರ್ಯಕ್ರಮಗಳನ್ನು ಅವರು ವಿರೋಧಿಸಿದರು. ಅವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ನನಗೆ ಕಪ್ಪು ಮಸಿ ಬಳಿಯುವ ದುರಾಲೋಚನೆ ಮಾಡಿದ್ದಾರೆ’ ಎಂದು ಕಿಡಿಕಾರಿದರು.

‘ಇಡೀ ದೇಶದಲ್ಲಿ ಮಾಡಿದ ರೀತಿ ಕರ್ನಾಟಕದಲ್ಲೂ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ಮಾಡುತ್ತಿದ್ದಾರೆ. ಬಿಜೆಪಿ ಯಾವತ್ತೂ ಸಂಪೂರ್ಣ ಬಲದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಅವರು ಅಧಿಕಾರಕ್ಕೆ ಬಂದಿದ್ದು ಹಿಂಬಾಗಿಲಿನಿಂದ, ಹಣ ಬಲದಿಂದ, ಆಪರೇಷನ್ ಕಮಲದ ಮೂಲಕ’ ಎಂದು ವಾಗ್ದಾಳಿ ನಡೆಸಿದರು.

‘ಕೋರ್ಟ್‌ ತೀರ್ಪು ನಿಮಗೆ ತೃಪ್ತಿ ತಂದಿದೆಯೇ’ ಎಂಬ ಪ್ರಶ್ನೆಗೆ, ‘ಇದೊಂದು ಕಾನೂನಾತ್ಮಕ ಹೋರಾಟ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಪ್ರತಿಕ್ರಿಯಿಸುತ್ತೇನೆ’ ಎಂದರು.

ಇದೇ ವೇಳೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಇದು ಬಿಜೆಪಿ– ಜೆಡಿಎಸ್‌ನ ಕುತಂತ್ರ. ಅವರ ಕುತಂತ್ರಕ್ಕೆ ನಮ್ಮ ಸರ್ಕಾರ ಜಗ್ಗುವುದಿಲ್ಲ, ಬಗ್ಗುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT