ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರು, ಮಂಡ್ಯ, ಕೊಪ್ಪಳ, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆ ನಡೆಸಿದರು.
ಬೆಂಗಳೂರಿನಲ್ಲಿ ಪಕ್ಷದ ಕಚೇರಿ ಬಳಿಯೇ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಸಿದ್ದರಾಮಯ್ಯ ಅವರು ಸಂವಿಧಾನ, ಪ್ರಜಾಪ್ರಭುತ್ವ, ನ್ಯಾಯಾಂಗಕ್ಕೆ ಗೌರವ ಕೊಡುವುದಾದರೆ ಕೂಡಲೇ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು ಎಂದು ಒತ್ತಾಯಿಸಿದರು.
ವಿಧಾನಪರಿಷತ್ ವಿರೋಧ ಪಕ್ಷದ ಸಚೇತಕ ಎನ್.ರವಿಕುಮಾರ್ ಮಾತನಾಡಿ, ‘ಪಾರ್ವತಿ ಮೇಡಂ ಅವರು ನಿಮ್ಮ ಪತ್ನಿ. ನಿಮ್ಮ ಕುಟುಂಬದವರೇ ಆಗಿದ್ದಾರೆ. ಪತ್ನಿ ಮಾಡಿದ ವ್ಯವಹಾರಕ್ಕೂ ತಮಗೂ ಸಂಬಂಧವಿಲ್ಲ ಎಂಬುದನ್ನು ಹೇಳಲು ಸಾಧ್ಯವಿಲ್ಲ. ನೈತಿಕೆ ಹೊಣೆಗಾರಿಕೆ ನಿಮ್ಮದೇ ಆಗಿದೆ’ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ‘ಕುರ್ಚಿ ಉಳಿಸಿಕೊಳ್ಳಲು ಭಂಡತನದಿಂದ ಪ್ರಯತ್ನ ಮಾಡಿದವರ ಇತಿಹಾಸ ಏನಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಕರ್ನಾಟಕ ರಾಜ್ಯದ ಗೌರವ ಉಳಿಸುವ ದೃಷ್ಟಿಯಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ’ ಎಂದು ಒತ್ತಾಯಿಸಿದರು.
ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ, ಎಸ್‌ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ರಾಜ್ಯ ಪದಾಧಿಕಾರಿಗಳು ಮತ್ತು ಪಕ್ಷದ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.