ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ಮುಂದೂಡಬೇಕು ಹಾಗೂ ಯಾವುದೇ ಕ್ರಮ ಕೈಗೊಳ್ಳಬಾರದು’ ಎಂಬ ಈ ಹಿಂದಿನ ಆದೇಶವನ್ನು ಹೈಕೋರ್ಟ್, ಇದೇ 12ರವರೆಗೆ ಪುನಃ ವಿಸ್ತರಿಸಿದೆ.
ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸೋಮವಾರ ಮುಂದುವರಿಸಿದರು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ವಾದ ಮಂಡಿಸಿ, ‘ರಾಜ್ಯಪಾಲರು, ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡುವ ಮುನ್ನ ತನಿಖಾಧಿಕಾರಿಯ ಪ್ರಾಥಮಿಕ ತನಿಖಾ ವರದಿ ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಿತ್ತು. ಆದರೆ, ಈ ಪ್ರಕರಣದಲ್ಲಿ ರಾಜ್ಯಪಾಲರು ಸ್ವತಃ ತನಿಖಾಧಿಕಾರಿ ರೀತಿಯಲ್ಲಿ ನಡೆದುಕೊಂಡಿದ್ದಾರೆ’ ಎಂದು ಬಲವಾಗಿ ಆಕ್ಷೇಪಿಸಿದರು.
‘ರಾಜ್ಯಪಾಲರು ಖಾಸಗಿ ವ್ಯಕ್ತಿಗಳು ನೀಡಿದ ದೂರನ್ನು ಆಧರಿಸಿ ತನಿಖೆಗೆ ನಿರ್ದೇಶಿಸಿದ್ದಾರೆ. ಆದರೆ, ಖಾಸಗಿ ವ್ಯಕ್ತಿಗಳನ್ನು, ಪೊಲೀಸ್ ಅಧಿಕಾರಿಗಳಿಗಿಂತಲೂ ಉನ್ನತ ಸ್ಥಾನದಲ್ಲಿ ಇರಿಸಲಾಗದು. ಹೀಗಾಗಿ, ಪ್ರಾಥಮಿಕ ತನಿಖೆ ಅಗತ್ಯವಿತ್ತು. ಆದರೆ, ಈ ಪ್ರಕರಣದಲ್ಲಿ ತನಿಖೆಯೇ ನಡೆದಿಲ್ಲ. ಲೋಕಾಯುಕ್ತ ಪೊಲೀಸ್ ಅಧಿಕಾರಿಗೆ ದೂರು ನೀಡಲಾಗಿದೆ. ಆದರೆ, ತನಿಖೆ ನಡೆಸಲು ಅವರಿಗೆ ಸೂಕ್ತ ಸಮಯ ನೀಡಲಾಗಿಲ್ಲ’ ಎಂದರು.
‘ರಾಜ್ಯಪಾಲರ ವಿವೇಚನೆ ಬಳಕೆ ಪರಿಪೂರ್ಣವಲ್ಲ. ಅವರು ತಮ್ಮ ಆದೇಶದಲ್ಲಿ ತನಿಖೆಗೆ ಅವಕಾಶ ನೀಡುತ್ತಿರುವುದಕ್ಕೆ ಸಕಾರಣಗಳನ್ನು ಉಲ್ಲೇಖಿಸಬೇಕಿತ್ತು. ತನಿಖೆಗೆ ಮಂಜೂರಾತಿ ನೀಡುವ ಮುನ್ನ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಕಲಂ 154ರ ಅನುಪಾಲನೆ ಆಗಿದೆಯೇ ಹೇಗೆ ಎಂಬುದನ್ನು ಪರಿಶೀಲಿಸಬೇಕಿತ್ತು’ ಎಂದು ಪ್ರತಿಪಾದಿಸಿದರು.
ದೂರುದಾರ ಸ್ನೇಹಪ್ರಿಯ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್, ‘ಸಿದ್ದರಾಮಯ್ಯ 1996-99ರ ನಡುವೆ ಉಪ ಮುಖ್ಯಮಂತ್ರಿಯಾಗಿದ್ದರು. ಈ ಸಂದರ್ಭದಲ್ಲಿ ಆಕ್ಷೇಪಾರ್ಹವಾದ 3.16 ಎಕರೆ ಜಮೀನಿನ ಡಿ–ನೋಟಿಫಿಕೇಶನ್ ಆಗಿದೆ. 2008-13ರ ಮಧ್ಯೆ ಜಮೀನು ವರ್ಗಾವಣೆಯಾಗಿದೆ. 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪರಿಹಾರ ಕೋರಿದ್ದಾರೆ. 2018-22ರ ಅವಧಿಯಲ್ಲಿ ಸಿದ್ದರಾಮಯ್ಯ ಶಾಸಕರಾಗಿದ್ದರು. ಹೀಗಾಗಿ, ಈ ಪ್ರಕರಣದಲ್ಲಿ ಅರ್ಜಿದಾರರು ನಡೆದುಕೊಂಡಿರುವ ರೀತಿ, ಪ್ರತಿಯೊಂದು ಕೆಲಸವೂ ಅವರ ಪರವಾಗಿಯೇ ನಡೆದಿದೆ’ ಎಂದರು.
ವಾದ ಆಲಿಸಿದ ನ್ಯಾಯಮೂರ್ತಿಯವರು ಇದೇ 12ರ ಮಧ್ಯಾಹ್ನ 12 ಗಂಟೆಗೆ ವಿಚಾರಣೆ ಮುಂದೂಡಿದರು. ‘ಅಂದು ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಮತ್ತು ರವಿವರ್ಮ ಕುಮಾರ್ ತಮ್ಮ ವಾದ ಪೂರ್ಣಗೊಳಿಸಬೇಕು. ಅದಕ್ಕೆ ಆಕ್ಷೇಪಣೆಗಳಿದ್ದರೆ ಅಂದೇ ಪೂರೈಸಬೇಕು’ ಎಂದು ಉಭಯ ಪಕ್ಷಗಾರರಿಗೆ ತಾಕೀತು ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.