ಬೆಂಗಳೂರು: ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಇಂದು ವಜಾಗೊಳಿಸಿದ್ದು, ರಾಜ್ಯಪಾಲರ ನಿರ್ಧಾರವನ್ನು ಎತ್ತಿಹಿಡಿದಿದೆ. ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಂಗಳವಾರ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನು, ರಾಜಭವನವನ್ನು ನಿಂದಿಸುತ್ತಾ ಬಂದಿದ್ದು, ಹೈಕೋರ್ಟ್‌ನ ತೀರ್ಪು ಇಡೀ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ‘ ಎಂದು ಟೀಕಿಸಿದ್ದಾರೆ.
‘ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನು ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು‘ ಎಂದು ಆಗ್ರಹಿಸಿದ್ದಾರೆ.
ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ @siddaramaiah ನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ.
— R. Ashoka (@RAshokaBJP) September 24, 2024
ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ… pic.twitter.com/NebYp5eotp
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.