ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರ ನಿರ್ಧಾರದ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ರಾಜ್ಯಪಾಲ ಥಾವರಚಂದ್ ಗೆಹಲೋತ್ ಇಂದು ಅನುಮತಿ ನೀಡಿದ್ದರು.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, 'ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿಯ ದಾಳವಾಗಿ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ರಾಜ್ಯದ ಸಾಂವಿಧಾನಿಕ ಉನ್ನತ ಹುದ್ದೆಯಲ್ಲಿರುವವರು ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸುತ್ತಿದ್ದಾರೆ' ಎಂದು ಹೇಳಿದ್ದಾರೆ.
'ಕೇಂದ್ರ ಸರ್ಕಾರವು ತನ್ನೆಲ್ಲ ಪ್ರಯತ್ನವನ್ನು ಮಾಡಬಹುದು. ಆದರೆ ನಾವು ಸಂವಿಧಾನದ ಪರವಾಗಿ ದೃಢವಾಗಿ ನಿಲ್ಲುತ್ತೇವೆ' ಎಂದು ಅವರು ಹೇಳಿದ್ದಾರೆ.