ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, 'ಸಿದ್ದಾಪರಾಧ' ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಸಿದ್ದರಾಮಯ್ಯನವರೇ, ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ' ಎಂದು ಹೇಳಿದ್ದಾರೆ.
'Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. 'ಸಿದ್ದಾಪರಾಧ' ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ' ಎಂದು ಹೇಳಿದ್ದಾರೆ.
'ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು...ನಿಮಗೂ ಭಯವಿದೆ! ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ?' ಎಂದು 'ಮೂಡಾಸಿದ್ವಿಲಾಸ' ಹ್ಯಾಶ್‌ಟ್ಯಾಗ್ ಸಹಿತ ಪೋಸ್ಟ್ ಮಾಡಿದ್ದಾರೆ.