ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ಮಧ್ಯಂತರ ಆದೇಶ 31ರವರೆಗೆ ವಿಸ್ತರಣೆ

Published : 29 ಆಗಸ್ಟ್ 2024, 10:27 IST
Last Updated : 29 ಆಗಸ್ಟ್ 2024, 10:27 IST
ಫಾಲೋ ಮಾಡಿ
Comments

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆಯನ್ನು ಮುಂದೂಡಬೇಕು ಮತ್ತು ಯಾವುದೇ ಆತುರದ ಕ್ರಮ ಕೈಗೊಳ್ಳಬಾರದು’ ಎಂಬ ಈ ಹಿಂದಿನ ಆದೇಶವನ್ನು ಹೈಕೋರ್ಟ್‌ ಇದೇ 31ರವರೆಗೆ ವಿಸ್ತರಿಸಿದೆ.

ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ, ‘ದೂರುದಾರ ಟಿ.ಜೆ.ಅಬ್ರಹಾಂ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 17ಎ ಅಡಿ ಪೂರ್ವಾನುಮತಿ ಬೇಕಿಲ್ಲ ಎಂದಿದ್ದಾರೆ. ಮತ್ತೊಬ್ಬ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಅನುಮತಿ ಕೋರಿರುವ ವಿಚಾರವನ್ನು ನಮ್ಮ ಗಮನಕ್ಕೆ ತಂದಿಲ್ಲ. ಅಲ್ಲದೇ, ತನಿಖೆಗೆ ಮಂಜೂರಾತಿ ನೀಡುವಾಗ ರಾಜ್ಯಪಾಲರು ಸೂಕ್ತ ರೀತಿಯಲ್ಲಿ ತೀರ್ಮಾನ ಕೈಗೊಂಡಿಲ್ಲ. ಹೀಗಾಗಿ, ಮಂಜೂರಾತಿ ಆದೇಶವನ್ನು ವಜಾಗೊಳಿಸಬೇಕು’ ಎಂದು ಕೋರಿದರು.

‘ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಮತ್ತು ಮುರುಗೇಶ್‌ ನಿರಾಣಿ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ ಮಂಜೂರಾತಿ ಕೋರಿ ಸಲ್ಲಿಸಲಾಗಿರುವ ಮನವಿಗಳು ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದಿದ್ದರೂ ರಾಜ್ಯಪಾಲರು ಅವುಗಳ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ, ಸಿದ್ದರಾಮಯ್ಯ ಪ್ರಕರಣದಲ್ಲಿ ಸಂಪುಟದ ಸಲಹೆಯನ್ನು ತಳ್ಳಿಹಾಕುವ ಮೂಲಕ ಸಹಜ ನ್ಯಾಯ ತತ್ವದ ಪ್ರಾಮುಖ್ಯತೆಯನ್ನು ಬದಿಗೊತ್ತಿದ್ದಾರೆ. ಸರಿಯಾದ ರೀತಿಯಲ್ಲಿ ತಮ್ಮ ವಿವೇಚನೆ ಬಳಕೆ ಮಾಡದೇ ಹೋಗಿದ್ದಾರೆ’ ಎಂದು ಆಕ್ಷೇಪಿಸಿದರು.

ರಾಜ್ಯಪಾಲರ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ಎಸ್‌.ತುಷಾರ್‌ ಮೆಹ್ತಾ ಅವರು, ‘ಇಡೀ ಪ್ರಕರಣವು ಶುದ್ಧ ಕಾನೂನಿನ ಪ್ರಶ್ನೆಯನ್ನು ಒಳಗೊಂಡಿರುವ ಕಾರಣ ಆಕ್ಷೇಪಣೆ ಸಲ್ಲಿಸುವ ಅವಶ್ಯತೆ ಇಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಮುಂಜೂರಾತಿ ನೀಡಿರುವುದರ ಕಡತ ಹಾಗೂ ಕಾನೂನಿಗೆ ಸಂಬಂಧಿಸಿದ ಲಿಖಿತ ವಾದಾಂಶಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಲಾಗುವುದು’ ಎಂದರು.

ದೂರುದಾರ ಪಿ.ಎಸ್.ಪ್ರದೀಪ್‌ ಕುಮಾರ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಅವರು, ‘ರಾಜ್ಯಪಾಲರ ಪ್ರಾಸಿಕ್ಯೂಷನ್‌ ಮಂಜೂರಾತಿ ಪ್ರಶ್ನಿಸಿರುವ ದಾವೆಯು ಶುದ್ಧ ಕಾನೂನಿನ ಪ್ರಶ್ನೆಯಾಗಿದೆ. ಹೀಗಾಗಿ, ಯಾವುದೇ ಆಕ್ಷೇಪಣೆ ಸಲ್ಲಿಸುವ ಅಂಶಗಳು ಬಾಕಿ ಉಳಿದಿಲ್ಲ. ಅರ್ಜಿದಾರರೇ ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಟ್ಟಿದ್ದಾರೆ’ ಎಂದರು.

ವಿಸ್ತೃತ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ಇದೇ 19ರಂದು ಮಾಡಿದ್ದ ಆದೇಶವನ್ನು ಇದೇ 31ರವರೆಗೆ ವಿಸ್ತರಿಸಿತು. ಅಲ್ಲಿಯವರೆಗೆ ಆಗಸ್ಟ್ 19ರ ಮಧ್ಯಂತರ ಆದೇಶ ಮುಂದುವರಿಯಲಿದೆ ಎಂದು ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT