ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ನೋಟಿಕರ್ ಹತ್ಯೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ಕಾಯಂ- ಹೈಕೋರ್ಟ್

Published 16 ಏಪ್ರಿಲ್ 2024, 15:51 IST
Last Updated 16 ಏಪ್ರಿಲ್ 2024, 15:51 IST
ಅಕ್ಷರ ಗಾತ್ರ

ಬೆಂಗಳೂರು: ಕಾರವಾರ ಶಾಸಕರಾಗಿದ್ದ ವಸಂತ ಅಸ್ನೋಟಿಕರ್ ಶೂಟೌಟ್ ಪ್ರಕರಣದ ಆರೋಪಿ ಶಾರ್ಪ್‌ ಶೂಟರ್ ರಾಜನ್ ಅಲಿಯಾಸ್ ಸಂಜಯ್ ಕಿಶನ್ ಮೊಹಿತೆಗೆ ಸೆಷನ್ಸ್‌ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಈ ಸಂಬಂಧ ಸಂಜಯ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ ಅವರಿದ್ದ ಧಾರವಾಡದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ವಿಚಾರಣಾ ನ್ಯಾಯಾಲಯದ ಆದೇಶ ಕಾನೂನುಬಾಹಿರ ಹಾಗೂ ದೋಷದಿಂದ ಕೂಡಿದೆ ಎಂಬುದನ್ನು ಸಾಬೀತುಪಡಿಸಲು ಯಾವುದೇ ಆಧಾರಗಳಿಲ್ಲ. ಹಾಗಾಗಿ ಈ ಮೇಲ್ಮನವಿಯನ್ನು ವಜಾಗೊಳಿಸಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ಪ್ರಕರಣವೇನು?: ಕಾರವಾರದ ಕಲ್ಯಾಣ ಮಂಟಪವೊಂದರಲ್ಲಿ ತಮ್ಮ ಮಗಳ ವಿವಾಹದ ಆರತಕ್ಷತೆ ಕಾರ್ಯಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ವಸಂತ ಅಸ್ನೋಟಿಕರ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಗಾಯಗೊಂಡಿದ್ದ ಅವರು 2000ದ ಫೆಬ್ರುವರಿ 19ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಗಣಪತಿ ಉಳವೇಕರ್ ಗಾಯಗೊಂಡಿದ್ದರು.

ಪ್ರಕರಣದ ಮೊದಲ ಆರೋಪಿ ದಿಲೀಪ್ ಅರ್ಜುನ್ ನಾಯ್ಕ್ ಸೇರಿದಂತೆ ಅಂಟೋನಿ ಅಲಿಯಾಸ್ ಟೋನಿ ರೊಜಾರಿಯೊ ಮತ್ತು ಓಂ ಪ್ರಕಾಶ್ ಗಿರಿ ಅಲಿಯಾಸ್ ಪಕ್ಯಾ ಅಲಿಯಾಸ್ ಬಾಬು ವಿಚಾರಣೆ ಹಂತದಲ್ಲಿಯೇ ಮೃತಪಟ್ಟಿದ್ದರು. ಹೀಗಾಗಿ, ಇವರ ವಿರುದ್ಧದ ಆರೋಪವನ್ನು ನ್ಯಾಯಾಲಯ ಕೈಬಿಟ್ಟಿತ್ತು.

ಆರನೇ ಆರೋಪಿಯಾದ ಮುಂಬೈ ಪಶ್ಚಿಮದ ಅಂಧೇರಿ ನಿವಾಸಿ ಸಂಜಯ್ ಮೊಹಿತೆಗೆ ಉತ್ತರ ಕನ್ನಡ ಜಿಲ್ಲೆಯ 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT