ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ಪ್ರಶ್ನಿಸಿದ ಅರ್ಜಿ:12ಕ್ಕೆ ವಿಚಾರಣೆ ಮುಂದೂಡಿಕೆ

Last Updated 2 ಜನವರಿ 2023, 12:53 IST
ಅಕ್ಷರ ಗಾತ್ರ

ಬೆಂಗಳೂರು: ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್‌ಜೆಎಂ) ಬೃಹನ್ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಇದೇ 12ಕ್ಕೆ ಮುಂದೂಡಿದೆ.

ಈ ಸಂಬಂಧ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್‌.ಪಾಟೀಲ್‌, ರಿಟ್‌ ಅರ್ಜಿ ತಿದ್ದುಪಡಿಗೆ ಮನವಿ ಮಾಡಿದರು. ಸರ್ಕಾರದ ಪರ ವಕೀಲರು, ಅಡ್ವೊಕೇಟ್‌ ಜನರಲ್‌ ಹಾಜರಿಲ್ಲದ ಕಾರಣ ಸಮಯಾವಕಾಶ ನೀಡುವಂತೆ ಕೋರಿದರು. ಇದೇ ವೇಳೆ ಪ್ರತಿವಾದಿ ಆಡಳಿತಾಧಿಕಾರಿ ಪಿ.ಎಸ್‌.ವಸ್ತ್ರದ ಪರ ಎಚ್‌.ಸುನಿಲ್‌ ಕುಮಾರ್ ವಕಾಲತ್ತು ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

‘ಮುರುಘಾ ಶರಣರ ಪದಚ್ಯುತಿಗೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಸಲಾಗಿರುವ ಸಿವಿಲ್‌ ದಾವೆಯನ್ನೂ (ಸ್ಕೀಂ ಸೂಟ್‌) ಇದೇ ಅರ್ಜಿ ಜೊತೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು‘ ಎಂದು ಹಿರಿಯ ವಕೀಲ ಗಂಗಾಧರ ಗುರುಮಠ ಅವರ ಮನವಿಯನ್ನು ಒಪ್ಪದ ನ್ಯಾಯಪೀಠ, ‘ಇದು ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿದ ಅರ್ಜಿ ಮಾತ್ರವಾಗಿದ್ದು, ನಿಮ್ಮ ಮನವಿಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಸಲ್ಲಿಸಿ’ ಎಂದು ಆದೇಶಿಸಿತು.

‘ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು, ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದಡಿ ಪೊಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದು, ರಾಜ್ಯ ಸರ್ಕಾರ ಪಿ.ಎಸ್.ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT