ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಅರಣ್ಯ, ಜೀವಿವಿಜ್ಞಾನ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಬೆಂಗಳೂರಿನಲ್ಲಿ ಸೋಮವಾರ ಬಿಡುಗಡೆ ಮಾಡಿದರು.
ವಿಶ್ವ ಆನೆ ದಿನದ ಸಂದರ್ಭದಲ್ಲಿ ಗಾಂಧಿಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ ಸಮಾರೋಪದಲ್ಲಿ 2024ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ಚಿತ್ರ ಹಾಗೂ ಪಟ್ಟಿಯನ್ನು ನೀಡಲಾಯಿತು.
ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊರಲಿದ್ದು, ‘ಮಹೇಂದ್ರ’, ‘ಗೋಪಿ’, ‘ಭೀಮ’, ‘ಪ್ರಶಾಂತ’, ‘ಧನಂಜಯ’, ‘ಸುಗ್ರೀವ’, ‘ಹಿರಣ್ಯ’, ‘ರೋಹಿತ’, ‘ಏಕಲವ್ಯ’, ‘ಕಂಜನ್’, ‘ಲಕ್ಷ್ಮಿ’, ‘ವರಲಕ್ಷ್ಮಿ’ ಮತ್ತು ‘ದೊಡ್ಡಹರವೆ ಲಕ್ಷ್ಮಿ’ ಆನೆಗಳು ಪಾಲ್ಗೊಳ್ಳಲಿವೆ.
ಸಂಪ್ರದಾಯದಂತೆ ಜಿಲ್ಲಾಡಳಿತದ ಸಹಯೋಗದಲ್ಲಿ, ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಆ.21ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ, ಮಾವುತರು ಮತ್ತು ಕಾವಾಡಿಗರಿಗೆ ಸತ್ಕರಿಸಿ ಆನೆಗಳನ್ನು ಕಾಡಿನಿಂದ ನಾಡಿಗೆ ಕಳುಹಿಸುವ ಗಜಪಯಣ ನಡೆಯಲಿದೆ. ಮೊದಲ ತಂಡದಲ್ಲಿ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ನಾಡಿಗೆ ಬರಲಿವೆ ಎಂದು ಅವರು ತಿಳಿಸಿದರು.
ತಮಿಳುನಾಡು ಅರಣ್ಯ ಸಚಿವ ಎಂ. ಮಥಿವೆಂಥನ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥ ಬ್ರಿಜೇಶ್ ದೀಕ್ಷಿತ್, ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಾಲ್ಕಡೆ, ಮೈಸೂರು ವಲಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಪಾಲ್ಗೊಂಡಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.