ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರಿಂದ ರಾಜಕೀಯ: ಸಿದ್ದರಾಮಯ್ಯ

Published 10 ಜುಲೈ 2024, 9:08 IST
Last Updated 10 ಜುಲೈ 2024, 9:08 IST
ಅಕ್ಷರ ಗಾತ್ರ

ಮೈಸೂರು: ‘ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಮುಡಾ ಹಗರಣದ ಬಗ್ಗೆ ಪ್ರಸ್ತಾಪವಾದರೆ ಉತ್ತರ ಕೊಡುತ್ತೇನೆ. ಆದರೆ, ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ‘ಆ ಬಗ್ಗೆ ಎಷ್ಟು ಸಲ ಹೇಳುವುದು’ ಎಂದು ಗರಂ ಆದರು.

‘ಮುಡಾದಿಂದ ಶೇ 50:50 ಅನುಪಾತದಡಿ ನಿವೇಶನ ಹಂಚಿಕೆ ಮಾಡದಂತೆ 2019ರಲ್ಲೇ ಆದೇಶಿಸಲಾಗಿದೆ. ಅದಾದ ಮೇಲೂ ಕೆಲವರಿಗೆ ನಿವೇಶನ ನೀಡಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ. ನನ್ನ ಪತ್ನಿಗೆ ಬದಲಿ ನಿವೇಶನ ಕೊಟ್ಟಿದ್ದನ್ನು ಬಿಜೆಪಿಯವರು ವಿವಾದ ಮಾಡುತ್ತಿದ್ದಾರೆ. ಅದು ವಿವಾದದ ವಿಷಯವೇ ಅಲ್ಲ. ಎಲ್ಲವೂ ಕಾನೂನು ಬದ್ಧವಾಗಿಯೇ ನಡೆದಿದೆ’ ಎಂದು ಸಮರ್ಥಿಸಿಕೊಂಡರು. ‘ಈ ವಿಷಯದಲ್ಲಿ ಬಿಜೆಪಿಯವರು ರಾಜಕಾರಣಕ್ಕೋಸ್ಕರ ಪ್ರತಿಭಟಿಸುತ್ತಿದ್ದಾರೆ’ ಎಂದು ದೂರಿದರು.

‘ಭೂಮಿ ಕಳೆದುಕೊಂಡವರ ಪ್ರಕರಣವೇ ಬೇರೆ. ನಮ್ಮ ಜಮೀನನ್ನು ಕಾನೂನಿಗೆ ವಿರುದ್ಧವಾಗಿ ಪಡೆದುಕೊಂಡ ಪ್ರಕರಣವಿದು. ನಮ್ಮ ಜಮೀನಿಗೆ ಪರಿಹಾರ ಕೊಡಿ ಎಂದು ಪತ್ನಿ ಕೇಳಿದ್ದರು. ವಿಜಯನಗರದಲ್ಲೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ. ಭೂಮಿಯನ್ನು ಅಕ್ರಮವಾಗಿ ಪಡೆದುಕೊಂಡಿರುವುದು ತಪ್ಪು ಎಂದು ಪ್ರಾಧಿಕಾರವೇ ಒಪ್ಪಿ ನಿವೇಶನ ನೀಡಿದೆ. ಹೀಗಿರುವಾಗ ಇದರಲ್ಲಿ ವಿವಾದವೇನಿದೆ, ಅಕ್ರಮವೇನಿದೆ?. ನಿಮ್ಮ ಜಮೀನನ್ನು ಹೀಗೆ ಪಡೆದುಕೊಂಡರೆ ಬಿಟ್ಟು ಬಿಡುತ್ತೀರಾ? ಎಂದು ಕೇಳಿದರು.

‘ಮುಡಾದಲ್ಲಿ ನಡೆದಿರುವ ಅಕ್ರಮದ ಕುರಿತು ಇಬ್ಬರು ಐಎಎಸ್‌ ಅಧಿಕಾರಿಗಳ ತಂಡದಿಂದ ತನಿಖೆ ಮಾಡಿಸುತ್ತಿದ್ದೇವೆ. ನಿವೇಶನಗಳು ಹಂಚಿಕೆ ಆಗಿರುವುದನ್ನು ಅಮಾನತಿನಲ್ಲಿಟ್ಟಿದ್ದೇವೆ. ಕಾನೂನು ಬಾಹಿರ ಎಂದು ವರದಿ ಬಂದರೆ, ಸಂಬಂಧಿಸಿದವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.

‘ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ. ನಮ್ಮವರೇ ಸಮರ್ಥರಿದ್ದಾರೆ’ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ:

‘ರಾಮನಗರ ಜಿಲ್ಲೆಯ ಎಲ್ಲಾ ಮುಖಂಡರೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಮಂಗಳವಾರ ನನ್ನ ಬಳಿಗೆ ಬಂದು, ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ, ಸಚಿವ ಸಂಪುಟ ಸಭೆಯಲ್ಲಿಟ್ಟು ನಿರ್ಧಾರ ಮಾಡುತ್ತೇನೆ ಎಂದಿದ್ದೇನೆ’ ಎಂದು ತಿಳಿಸಿದರು.

‘ಈ ಸರ್ಕಾರ ಹೆಸರು ಬದಲಾಯಿಸಿದರೆ, ಮುಂದೆ ನಾವು ಅಧಿಕಾರಕ್ಕೆ ಬಂದಾಗ ಹೆಸರು ಕಿತ್ತುಹಾಕುತ್ತೇವೆ’ ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ, ‘ಅವರು ಅಧಿಕಾರಕ್ಕೆ ಬಂದರೆ ತಾನೇ ಕಿತ್ಹಾಕುವುದು? ಅದೆಲ್ಲವೂ ಅವರ ಭ್ರಮೆಯಷ್ಟೆ’ ಎಂದರು.

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹94 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆಗಳ ಮೇಲೆ ದಾಳಿ ನಡೆಸಿರುವುದಕ್ಕೆ ಪ್ರತಿಕ್ರಿಯಿಸಿದ ಸಿಎಂ, ‘ಇಡಿಯವರು ಕಾನೂನು ಪ್ರಕಾರ ಅವರ ಕೆಲಸ ಮಾಡಲಿ. ನಾವೇನೂ ಮಧ್ಯಪ್ರವೇಶಿಸುವುದಿಲ್ಲ’ ಎಂದು ತಿಳಿಸಿದರು.

‘ರಾಜ್ಯದ ಹಲವು ಪ್ರಮುಖ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಚೆಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದ್ದೇನೆ. ಪರಿಶೀಲಿಸುತ್ತೇನೆ, ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

‘ಈ ಬಾರಿ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಕರ್ನಾಟಕದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಾರೆ ಎಂಬ ವಿಶ್ವಾಸವಿದೆ. ಈಚೆಗೆ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದ್ದೇನೆ’ ಎಂದರು.

‘ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮೀಸಲಾತಿ ಆಗಬೇಕಾಗಿದೆ. ಆ ವಿಷಯ ಹೈಕೋರ್ಟ್‌ನಲ್ಲಿದೆ. ಬಿಬಿಎಂಪಿಯದ್ದು ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯಾಲಯದ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರತಿಕ್ರಿಯಿಸಿದರು.

ಸಚಿವರಾದ ಡಾ.ಎಚ್‌.ಸಿ. ಮಹದೇವಪ್ಪ, ಜಮೀರ್‌ ಅಹಮದ್, ಮುಡಾ ಅಧ್ಯಕ್ಷ ಕೆ.ಮರೀಗೌಡ, ಕಾಂಗ್ರೆಸ್ ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್‌, ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT