ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ

Published 15 ಡಿಸೆಂಬರ್ 2023, 11:13 IST
Last Updated 15 ಡಿಸೆಂಬರ್ 2023, 11:13 IST
ಅಕ್ಷರ ಗಾತ್ರ

ನವದೆಹಲಿ: ‘ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ, ಹಲ್ಲೆ ನಡೆಸಿದ ಪ್ರಕರಣ ಅತ್ಯಂತ ಹೀನಾಯ ಕೃತ್ಯವಾಗಿದೆ. ಈ ಕುರಿತು ಐದು ಸದಸ್ಯರ ಸತ್ಯಶೋಧನ ಸಮಿತಿ ರಚಿಸಲಾಗಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

‘ಸಮಿತಿಯಲ್ಲಿರುವ ಲೋಕಸಭಾ ಸದಸ್ಯರಾದ ಐವರು ಮಹಿಳೆಯರಿದ್ದು, ಅವರು ಘಟನೆ ನಡೆದ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಲಿದ್ದಾರೆ. ನಂತರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರಿಗೆ ವರದಿ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.

ಸಮಿತಿಯಲ್ಲಿ ಸಂಸದೆಯರಾದ ಅರ್ಪಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೇಟ್ ಚಟರ್ಜಿ, ರಂಜೀತಾ ಕೊಲಿ, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಇದ್ದಾರೆ.

ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡ ಸದಾನಂದ ಗೌಡ, ‘ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಇಂಥ ಘಟನೆಗಳು ನಡೆದಾಗ ಅವುಗಳನ್ನು ನಿರ್ವಹಿಸುವಲ್ಲಿನ ಬೇಜವಾಬ್ದಾರಿ ವರ್ತನೆಗಳು ಆಗಾಗ ಬಹಿರಂಗವಾಗುತ್ತಲೇ ಇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದ್ದಾರೆ.

ಘಟನೆಯನ್ನು ಖಂಡಿಸಿ ಪಕ್ಷವು ಡಿ. 16ರಂದು ರಾಜ್ಯವ್ಯಾಪಿ ಮುಷ್ಕರ ನಡೆಸುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಈವರೆಗೂ ಭೇಟಿಯಾಗಿಲ್ಲ ಎಂದೂ ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಯುವತಿಯೊಂದಿಗೆ ಯುವಕನೊಬ್ಬ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಯುವಕನ ತಾಯಿಯನ್ನು ಡಿ. 11ರಂದು ಥಳಿಸಿದ ಗುಂಪು, ಅವರನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ಈವರೆಗೂ ಪೊಲೀಸರು ಬಂಧಿಸಿದ್ದಾರೆ. ಭಾಗಿಯಾಗಿರುವ ಇತರ ಎಂಟು ಜನರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT