ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ

Published 22 ಏಪ್ರಿಲ್ 2024, 15:16 IST
Last Updated 22 ಏಪ್ರಿಲ್ 2024, 15:16 IST
ಅಕ್ಷರ ಗಾತ್ರ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಬಾಬಾಸಾಹೇಬ ಖೊಂಡಾನಾಯಕ್‌ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

‘ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಗಾಗಿ ಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ತಂಡದ ಅಧಿಕಾರಿಗಳು ಹುಬ್ಬಳ್ಳಿಗೆ ಹೋಗಿದ್ದಾರೆ. ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಪ್ರಕರಣದ ಇತರೆ ಮಾಹಿತಿ ಕಲೆಹಾಕಿ, ತನಿಖೆ ಮುಂದುವರಿಸಲಿದ್ದಾರೆ’ ಎಂದು ಸಿಐಡಿ ಡಿಜಿಪಿ ಎಂ.ಎ. ಸಲೀಂ ‘ಪ್ರಜಾವಾಣಿ’ಗೆ ತಿಳಿಸಿದರು.

ಆರೋಪಿ ಕಸ್ಟಡಿ ಸಾಧ್ಯತೆ

‘ಪ್ರಕರಣದ ಆರೋಪಿ ಫಯಾಜ್‌ನನ್ನು ನ್ಯಾಯಾಲಯದ ಅನುಮತಿ ಪಡೆದು ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಇದಕ್ಕೆ ಸಂಬಂಧಪಟ್ಟಂತೆ ಕಾನೂನು ಪ್ರಕ್ರಿಯೆ ಶುರುವಾಗಿದೆ’ ಎಂದು ಮೂಲಗಳು ಹೇಳಿವೆ.

‘ವಿದ್ಯಾನಗರ ಪೊಲೀಸ್ ಠಾಣೆಗೂ ಭೇಟಿ ನೀಡಲಿರುವ ಸಿಐಡಿ ತಂಡ, ಪ್ರಕರಣದ ಕಡತಗಳನ್ನು ಸುಪರ್ದಿಗೆ ಪಡೆಯಲಿದೆ. ನೇಹಾ ಹಿರೇಮಠ ಅವರ ಪೋಷಕರು, ಶಿಕ್ಷಕರು, ಕುಟುಂಬಸ್ಥರು, ಸ್ನೇಹಿತರು ಹಾಗೂ ಇತರರನ್ನು ವಿಚಾರಣೆ ನಡೆಸುವ ಸಂಭವವಿದೆ. ಜೊತೆಗೆ, ಆರೋಪಿ ತಂದೆ–ತಾಯಿ ಹಾಗೂ ಸ್ನೇಹಿತರಿಗೂ ವಿಚಾರಣೆಯ ನೋಟಿಸ್ ನೀಡುವ ಸಾಧ್ಯತೆ ಇದೆ’ ಎಂದು ಮೂಲಗಳು ತಿಳಿಸಿವೆ.

ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ

ಶಿವಮೊಗ್ಗ/ತುಮಕೂರು: ನೇಹಾ ಹಿರೇಮಠ ಅವರ ಕೊಲೆ ಪ್ರಕರಣದ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಸರ್ಕಾರ ನೇಹಾ ಕುಟುಂಬದ ಪರವಾಗಿದೆ. ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಎಚ್.ಕೆ. ಪಾಟೀಲ ಸಂತೋಷ ಲಾಡ್ ಅವರು ನೇಹಾ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ನಾನೂ ಹೋಗುತ್ತೇನೆ’ ಎಂದರು. ತುಮಕೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ ಅವರು ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಲು ಸಿಐಡಿ ಸೂಚಿಸಲಾಗಿದೆ ಎಂದು ತಿಳಿಸಿದರು. 

10ರಿಂದ 12 ದಿನಗಳಲ್ಲಿ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತನಿಖಾಧಿಕಾರಿಗಳ ತಂಡ ಸೋಮವಾರ ಹುಬ್ಬಳ್ಳಿಗೆ ತೆರಳಿದ್ದು ತನಿಖೆ ಕೈಗೆತ್ತಿಕೊಂಡಿದೆ. ನೇಹಾ ಕೊಲೆಯ ಹಿಂದೆ ಇನ್ನೂ ನಾಲ್ವರು ಇದ್ದಾರೆ ಎಂದು ಅವರ ಕುಟುಂಬದವರು ಹೇಳಿದ್ದಾರೆ. ಆ ಬಗ್ಗೆಯೂ ತನಿಖೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ. ತನಿಖೆ ನಂತರ ಸತ್ಯಾಂಶ ಹೊರ ಬರಲಿದ್ದು ನೊಂದ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂದರು.

ನೇಹಾ ಕೊಲೆ ವಿಚಾರವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಈ ವಿಚಾರ ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಹಾಗಾಗಿ ಸತ್ಯವನ್ನು ಹೊರ ತರುವ ಸಲುವಾಗಿ ಸಿಐಡಿ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

‘ನನಗೆ ಬಂದ ಪ್ರಾಥಮಿಕ ವರದಿ ಆಧರಿಸಿ ಹೇಳಿಕೆ ನೀಡಿದ್ದೆ. ಈ ಬಗ್ಗೆ ವಿದ್ಯಾರ್ಥಿಯ ತಂದೆ– ತಾಯಿಗೆ ನೋವಾಗಿದ್ದರೆ ವಿಷಾದವನ್ನೂ ವ್ಯಕ್ತಪಡಿಸಿದ್ದೇನೆ. ಆದರೆ ಅದೇ ಹೇಳಿಕೆ ಮುಂದಿಟ್ಟುಕೊಂಡು ಕಟುವಾಗಿ ಟೀಕಿಸುವುದು ನಿಂದಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ’ ಎಂದು ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT