ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

Published 29 ಡಿಸೆಂಬರ್ 2023, 16:03 IST
Last Updated 29 ಡಿಸೆಂಬರ್ 2023, 16:03 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾರ್ವಜನಿಕ ವೇದಿಕೆಯಲ್ಲಿ ಮಾಡಿದ ಭಾಷಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್. ಎಸ್‌. ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

‘ನನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು’ ಎಂದು ಕೋರಿ ಪ್ರಭಾಕರ ಭಟ್  ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಭಾಕರ ಭಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಅರ್ಜಿದಾರರ ವಿರುದ್ಧ ರಾಜಕೀಯಪ್ರೇರಿತ ಎಫ್ಐಆರ್ ದಾಖಲು ಮಾಡಲಾಗಿದೆ. ಅವರು ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ. ಸಾಂವಿಧಾನಿಕವಾಗಿ ತಮಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯದಡಿ ಕೆಲವು ವಾಸ್ತವಾಂಶಗಳನ್ನು ಜನರ ಮುಂದೆ ತೆರೆದಿಟ್ಟಿದ್ದಾರೆ. ಅವರ ತೇಜೋವಧೆ ಮಾಡುವ ಏಕೈಕ ದುರುದ್ದೇಶದಿಂದ ಇಂತಹ ದೂರು ದಾಖಲಿಸಲಾಗಿದೆ. ದೂರುದಾರರು ರಾಜಕೀಯ ಪಕ್ಷದ ಪದಾಧಿಕಾರಿಯಾಗಿದ್ದು ಇಂತಹುದೇ ಅಪರಾಧಿಕ ಕಲಂಗಳಡಿ ದೂರು ದಾಖಲಿಸಬೇಕು, ಅವರ ವಿರುದ್ಧ ರೌಡಿ ಶೀಟ್ ತೆರೆಯಬೇಕು ಎಂದು ಪೊಲೀಸರಿಗೆ ಸೂಚಿಸುವ ಮೂಲಕ‌ ಕಾನೂನಿನ ದುರುಪಯೋಗ ಮಾಡಿಕೊಂಡಿದ್ದಾರೆ. ಆದ್ದರಿಂದ, ಈ ದೂರು ಮತ್ತು ಕೋರ್ಟ್ ವಿಚಾರಣೆಯನ್ನು ರದ್ದುಗೊಳಿಸಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರ ವಿರುದ್ಧ ಪೊಲೀಸರು ಮುಂದಿನ ವಿಚಾರಣೆ ತನಕ ಯಾವುದೇ ಬಲವಂತದ ಕ್ರಮ‌ಕೈಗೊಳ್ಳಬಾರದು’ ಎಂದು ರಾಜ್ಯ ಪ್ರಾಸಿಕ್ಯೂಷನ್ ಪರ ವಕೀಲರಿಗೆ ಮಧ್ಯಂತರ ನಿರ್ದೇಶನ ನೀಡಿತು.

ಪ್ರತಿವಾದಿ ಪ್ರಾಸಿಕ್ಯೂಷನ್ ಹಾಗೂ ದೂರುದಾರರಾದ ನಜ್ಮಾ ನಜೀರ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?: ‘ಪ್ರಭಾಕರ ಭಟ್ ಅವರು, ಕೋಮು ಸಾಮರಸ್ಯ ಕದಡುವ ಭಾಷಣ ಮಾಡಿದ್ದಾರೆ’ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಚಿಕ್ಕನೇರಳೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT