ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಮ ವಹಿಸಲು ಆರೋಗ್ಯ ಆಯುಕ್ತರಿಗೆ ಸೂಚನೆ: ಬಿಬಿಎಂಪಿ

ಸಾರ್ವಜನಿಕರ ಬಳಕೆಗೆ ರೆಸ್ಟೋರೆಂಟ್‌, ಹೋಟೆಲ್‌ಗಳ ಶೌಚಾಲಯ
Published 24 ಜನವರಿ 2024, 22:58 IST
Last Updated 24 ಜನವರಿ 2024, 22:58 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾರ್ವಜನಿಕ ರೆಸ್ಟೊರೆಂಟ್‌ ಮತ್ತು ಹೋಟೆಲ್‌ಗಳಲ್ಲಿನ ಶೌಚಾಲಯಗಳನ್ನು ಸಾರ್ವಜನಿಕರೂ ಬಳಸುವಂತಾಗಬೇಕು. ಈ ದಿಸೆಯಲ್ಲಿ ಸೂಕ್ತ ಆದೇಶ ಹೊರಡಿಸಲು ಅಗತ್ಯ ಕ್ರಮ ಜರುಗಿಸುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆರೋಗ್ಯ ಆಯುಕ್ತರಿಗೆ ಸೂಚಿಸಲಾಗಿದೆ‘ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ, 'ಲೆಟ್ಸ್ ಕಿಟ್ ಫೌಂಡೇಷನ್' ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ಈ ಕುರಿತ ವಸ್ತುಸ್ಥಿತಿ ವರದಿಯನ್ನು ನ್ಯಾಯಪೀಠಕ್ಕೆ ಒದಗಿಸಿದರು. ವರದಿಯಲ್ಲಿ ‘ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆ ಮಾಡಲು ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯು 2023ರ ನವೆಂಬರ್ 29ರಂದು ಸಭೆ ನಡೆಸಿದೆ ಮತ್ತು ಸಾರ್ವಜನಿಕ ರೆಸ್ಟೊರೆಂಟ್‌ ಮತ್ತು ಹೋಟೆಲ್‌ಗಳಲ್ಲಿನ ಶೌಚಾಲಯಗಳನ್ನು ಸಾರ್ವಜನಿಕರೂ ಬಳಸುವಂತಾಗಬೇಕೆಂದು ತಿಳಿಸಲಾಗಿದೆ‘ ಎಂದು ವಿವರಿಸಲಾಗಿದೆ.

ವರದಿಯಲ್ಲಿ ಏನಿದೆ?: ‘ನಗರದಲ್ಲಿರುವ 172 ಇಂದಿರಾ ಕ್ಯಾಂಟೀನ್‌ಗಳಲ್ಲಿರುವ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಅನುಮತಿಸುವಂತೆ ಸಮಿತಿ ಅಧ್ಯಕ್ಷರು ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚಿಸಿದ್ದಾರೆ‘ ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ 246 ಸಾರ್ವಜನಿಕ ಶೌಚಾಲಯ, 85 ಹಾಲಿ ಶೌಚಾಲಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು 229 ಇ-ಶೌಚಾಲಯಗಳ ಕಾರ್ಯಚರಣೆ ಹಾಗೂ ನಿರ್ವಹಣೆಗೆ ಟೆಂಡರ್‌ ಕರೆಯಲಾಗಿದೆ’ ಎಂದು ತಿಳಿಸಲಾಗಿದೆ.

‘ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ 100 ಶೀ (ಮಹಿಳೆಯರ ಬಳಕೆಗೆ) ನಿರ್ಮಿಸಲು ಶೀಘ್ರ ಟೆಂಡರ್‌ ಆಹ್ವಾನಿಸಲಾಗುವುದು. ಅದಕ್ಕಾಗಿ ₹ 25 ಕೋಟಿ ಅನುದಾನವನ್ನು 2024-25ನೇ ಸಾಲಿನ ಬಜೆಟ್‌ನಲ್ಲಿ ಮೀಸಲಿಡಲು ಪ್ರಸ್ತಾವಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ 246 ಸಾರ್ವಜನಿಕ ಶೌಚಾಲಯ ನಿರ್ಮಿಸಲು ಈಗಾಗಲೇ ಟೆಂಡರ್‌ ಅಧಿಸೂಚನೆ ಹೊರಡಿಸಲಾಗಿದೆ. 46 ಒಡಿಎಫ್‌++ ನಿರ್ಮಾಣಕ್ಕೆ ಖಾಸಗಿ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಹೊಸ ಶೌಚಾಲಯಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮತ್ತು ಅಂಗವಿಕಲರ ಬಳಕೆಗೆ ಪ್ರತ್ಯೇಕ ಶೌಚಾಲಯ ಬ್ಲಾಕ್‌ ಒದಗಿಸಲು ಕ್ರಮ ವಹಿಸಲಾಗಿದೆ. 185 ಹಾಲಿ ಶೌಚಾಲಯಗಳನ್ನು ಮೇಲ್ದರ್ಜೆಗೇರಿಸಲು ಟೆಂಡರ್‌ ಕರೆಯಲಾಗಿದೆ. 229 ಇ-ಶೌಚಾಲಯಗಳ ಕಾರ್ಯಾಚರಣೆ ಅಥವಾ ನಿರ್ವಹಣೆಗೆ ಟೆಂಡರ್‌ ಕರೆಯಲಾಗಿದೆ’ ಎಂದು ವರದಿಯಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT