ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಆದೇಶ ಪಾಲಿಸದ ಸಿಇಒಗಳಿಗೆ ನೋಟಿಸ್‌: ಸಚಿವ ಪ್ರಿಯಾಂಕ್‌ ಖರ್ಗೆ

Published 2 ಜನವರಿ 2024, 16:25 IST
Last Updated 2 ಜನವರಿ 2024, 16:25 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರದ ಆದೇಶ, ಸೂಚನೆ ಪಾಲಿಸದೆ, ತಮ್ಮದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (ಸಿಇಒ) ನೋಟಿಸ್‌ ನೀಡಬೇಕು’ ಎಂದು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದರು.

ಸಿಇಒಗಳ ಜೊತೆ ಮಂಗಳವಾರ ವಿಡಿಯೊ ಸಂವಾದ ನಡೆಸಿ, ಜಿಲ್ಲೆಗಳಲ್ಲಿ ಆಗಿರುವ ಪ್ರಗತಿ ಪರಿಶೀಲಿಸಿದ ಸಚಿವರು, ‘ವಾರಕ್ಕೊಮ್ಮೆ ಸಿಇಒಗಳು ಕಡ್ಡಾಯವಾಗಿ ತಾಲ್ಲೂಕು ಕೇಂದ್ರಗಳಿಗೆ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಬೇಕು. ಕ್ಷೇತ್ರಮಟ್ಟದಲ್ಲಿ ಯೋಜನೆಗಳ ಆಶಯ ಹಾಗೂ ಅವುಗಳ ಅಗತ್ಯದ ಕುರಿತು ಸಿಇಒಗಳು ಮಾಹಿತಿ ನೀಡಿದರೆ ಮತ್ತಷ್ಟು ಜನಸ್ನೇಹಿ ಕಾರ್ಯಕ್ರಮಗಳನ್ನು ರೂಪಿಸಲು ಅನುಕೂಲ ಆಗಬಹುದು’ ಎಂದರು.

‘ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆ ಹಾಗೂ ಲೋಕಾಯುಕ್ತ ತನಿಖೆಯ ಸಂಬಂಧದಲ್ಲಿ ತ್ವರಿತ ಕ್ರಮ ಆಗದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವರು, ‘ವಿಳಂಬ ಮಾಡದೆ ಕ್ರಮ ಕೈಗೊಂಡು ಪ್ರಕರಣಗಳಿಗೆ ಅಂತ್ಯ ಹಾಡಬೇಕು’ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸುಸಜ್ಜಿತ ಕಟ್ಟಡ ಇಲ್ಲದ ಗ್ರಾಮ ಪಂಚಾಯತಿ ಕಚೇರಿಗಳಿಗೆ ಕಟ್ಟಡ ನಿರ್ಮಿಸಲು ತಲಾ ₹ 20 ಲಕ್ಷ ಅನುದಾನ ನೀಡಲಾಗುತ್ತಿದೆ. 283 ಕಟ್ಟಡಗಳು ನಿರ್ಮಾಣಗೊಂಡಿವೆ. 151 ಕಟ್ಟಡಗಳ ನಿರ್ಮಾಣ ವಿವಿಧ ಹಂತಗಳಲ್ಲಿವೆ. 22 ಗ್ರಾಮಗಳಲ್ಲಿ ನಿವೇಶನ ಲಭ್ಯವಾಗಬೇಕಾಗಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಗ್ರಾಮ ಪಂಚಾಯತಿ ಕಚೇರಿಗಳಲ್ಲಿ 46,655 ಸಿಬ್ಬಂದಿ ಇದ್ದಾರೆ. ಈ ಪೈಕಿ, ಶೇ 63ರಷ್ಟು ಮಂದಿ ಮಾತ್ರ ಇ-ಹಾಜರಿ ಬಳಸುತ್ತಿರುವುದನ್ನು ಗಮನಿಸಿದ ಸಚಿವರು, ತಕ್ಷಣ ಎಲ್ಲ ಸಿಬ್ಬಂದಿಯನ್ನು ಇ–ಹಾಜರಾತಿ ವ್ಯಾಪ್ತಿಗೆ ತರಬೇಕು. ಈ ವ್ಯವಸ್ಥೆಗೆ ಬಾರದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಇ-ಸ್ವತ್ತು ದಾಖಲೆಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬ ಸರಿಯಲ್ಲ. ಜನೋಪಯೋಗಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT