ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರಿಗೆ ಏಮ್ಸ್‌: ಕೇಂದ್ರಕ್ಕೆ ಎನ್‌.ಎಸ್‌.ಭೋಸರಾಜು ನೇತೃತ್ವದ ನಿಯೋಗದ ಮನವಿ

ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯಾಗೆ ನಿಯೋಗದ ಮನವಿ
Published 22 ಆಗಸ್ಟ್ 2023, 15:38 IST
Last Updated 22 ಆಗಸ್ಟ್ 2023, 15:38 IST
ಅಕ್ಷರ ಗಾತ್ರ

ನವದೆಹಲಿ: ರಾಯಚೂರು ಜಿಲ್ಲೆಯಲ್ಲಿ ಏಮ್ಸ್‌ ಸ್ಥಾಪಿಸಬೇಕು ಎಂದು ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹಾಗೂ ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಭೋಸರಾಜು ನೇತೃತ್ವದ ಜನಪ್ರತಿನಿಧಿಗಳ ನಿಯೋಗವು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು. 

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಶರಣ ಪ್ರಕಾಶ ಪಾಟೀಲ, ‘ರಾಜ್ಯದಲ್ಲಿ ಈವರೆಗೆ ಏಮ್ಸ್ ಸ್ಥಾಪನೆಯಾಗಿಲ್ಲ. ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ಒತ್ತಾಯಿಸಿದ್ದೇವೆ. ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಜ್ಯ ಸರ್ಕಾರ ಶಿಫಾರಸು ಮಾಡಿದ ಜಾಗದಲ್ಲಿ ಸ್ಥಾಪನೆ ಮಾಡುವುದಾಗಿ ಭರವಸೆ ನೀಡಿದ್ದಾರೆ’ ಎಂದರು. 

ಎನ್‌.ಎಸ್.ಭೋಸರಾಜು ಮಾತನಾಡಿ, ‘ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ರಾಜ್ಯ ಸರ್ಕಾರ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ. ಜತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ದೇಶದ 120 ಅಭಿವೃದ್ಧಿ ಆಕಾಂಕ್ಷಿ ಜಿಲ್ಲೆಗಳಲ್ಲಿ ರಾಯಚೂರು ಸಹ ಒಂದು. ಜಿಲ್ಲೆಯಲ್ಲೇ ಏಮ್ಸ್‌ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಇದು ಕಲ್ಯಾಣ ಕರ್ನಾಟಕ ಭಾಗದ ಜನಪ್ರತಿನಿಧಿಗಳ ಒಕ್ಕೊರಲ ಬೇಡಿಕೆಯೂ ಹೌದು’ ಎಂದರು. 

‘ಏಮ್ಸ್‌ ಸ್ಥಾಪನೆಗೆ ₹2 ಸಾವಿರ ಕೋಟಿ ಬೇಕಿದೆ. ಈ ಅನುದಾನವನ್ನು ಕೇಂದ್ರ ಸರ್ಕಾರ ನೀಡಲಿದೆ. ಭೂಮಿ ಹಾಗೂ ನೀರನ್ನು ರಾಜ್ಯ ಸರ್ಕಾರ ನೀಡಬೇಕಿದೆ. ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಲಿದೆ’ ಎಂದರು. 

ನಿಯೋಗದಲ್ಲಿ ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಸಂಸದರಾದ ರಾಜಾ ಅಮರೇಶ್ವರ ನಾಯಕ್‌, ಕರಡಿ ಸಂಗಣ್ಣ, ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್‌, ಡಾ.ಶಿವರಾಜ ಪಾಟೀಲ, ಕರೆಮ್ಮ, ವಿಧಾನ ಪರಿಷತ್‌ ಸದಸ್ಯ ಶರಣಗೌಡ ಬಯ್ಯಾಪುರ ಮತ್ತಿತರರು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT