ಬೆಂಗಳೂರು: ‘ಕೇಂದ್ರ ಸರ್ಕಾರ ತರಲು ಹೊರಟಿರುವ ‘ಒಂದು ದೇಶ, ಒಂದು ಚುನಾವಣೆ’ಯು ಪ್ರಜಾಪ್ರಭುತ್ವಕ್ಕೆ ಬಗೆಯುವ ದ್ರೋಹ’ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
‘ಒಂದು ದೇಶ, ಒಂದು ಚುನಾವಣೆ’ ಸಂಬಂಧ ತಜ್ಞರ ಸಮಿತಿ ಮಾಡಿದ್ದ ಶಿಫಾರಸುಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ‘ಇದು ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಈ ಪ್ರಸ್ತಾವದಲ್ಲಿ ಪರಿಹಾರವೇ ಇಲ್ಲ’ ಎಂದರು.
‘ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ’ ಎಂದರು.
‘ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ತನ್ನ ವೈಫಲ್ಯ ಮುಚ್ಚಿಕೊಳ್ಳಲು ಮೋದಿ ಸರ್ಕಾರ ಮಾಡುತ್ತಿರುವ ಗಿಮಿಕ್ ಇದು’ ಎಂದು ಲೇವಡಿ ಮಾಡಿದರು.