ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳ ಅಟ್ಟಹಾಸ: ಆರ್. ಅಶೋಕ

Published : 12 ಸೆಪ್ಟೆಂಬರ್ 2024, 5:44 IST
Last Updated : 12 ಸೆಪ್ಟೆಂಬರ್ 2024, 5:44 IST
ಫಾಲೋ ಮಾಡಿ
Comments

ಬೆಂಗಳೂರು: 'ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಗುರುವಾರ ಆರೋಪಿಸಿದ್ದಾರೆ.

ಮಂಡ್ಯದ ನಾಗಮಂಗಲ ಪಟ್ಟಣದ ಮೈಸೂರು ರಸ್ತೆಯ ದರ್ಗಾ ಬಳಿ ಬುಧವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅಶೋಕ, 'ನಾವು ಕರ್ನಾಟಕ ಅಥವಾ ತಾಲಿಬಾನ್‌ನಲ್ಲಿ ವಾಸಿಸುತ್ತಿದ್ದೇವೆಯೇ' ಎಂದು ಕಿಡಿ ಕಾರಿದ್ದಾರೆ.

ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಆರ್. ಅಶೋಕ, 'ನಿನ್ನೆ (ಬುಧವಾರ)ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೊಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ' ಎಂದು ಆರೋಪಿಸಿದ್ದಾರೆ.

'ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ' ಎಂದು ವಾಗ್ದಾಳಿ ನಡೆಸಿದ್ದಾರೆ.

'ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಒತ್ತಾಯಿಸುತ್ತೇನೆ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT