ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8, 9 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ನಿಗದಿ ಮಾಡಿರುವ ‘ಬೋರ್ಡ್ ಪರೀಕ್ಷೆ’ಗೆ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ರುಪ್ಸ) ಆಕ್ಷೇಪ ವ್ಯಕ್ತಪಡಿಸಿದೆ.
ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವಕಾಶ ನೀಡಿದೆ. ಈ ನಿಯಮ ಸಿಬಿಎಸ್‌ಇ, ಐಸಿಎಸ್‌ಇ ಪಠ್ಯಕ್ರಮದ ಶಾಲೆಗಳಿಗೆ ಅನ್ವಯಿಸುವುದಿಲ್ಲ. ಶಿಕ್ಷಣ ಇಲಾಖೆಯ ಈ ನಿರ್ಧಾರ ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ಉಲ್ಲಂಘನೆ. ಮಕ್ಕಳಲ್ಲಿ ಪರೀಕ್ಷಾ ಭಯದ ವಾತಾವರಣ ಮೂಡಿಸಿದೆ ಎಂದು ರುಪ್ಸ-ಕರ್ನಾಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ದೂರಿದ್ದಾರೆ.
ಕರ್ನಾಟಕ ಶಿಕ್ಷಣ ಕಾಯಿದೆಯ ನಿಯಮಗಳಂತೆ ಕಲಿಕೆಯ ಪ್ರಗತಿ ಪರಿಶೀಲಿಸಲು 2012ರಿಂದ ನಿರಂತರ ಮೌಲ್ಯಾಂಕನ ಪದ್ದತಿ ಜಾರಿಗೊಳಿಸಲಾಗಿದೆ. ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಅತ್ಯಂತ ವೈಜ್ಞಾನಿಕವಾಗಿ ವಿಶ್ಲೇಷಿಸಲಾಗುತ್ತಿದೆ. ಮತ್ತೆ ಮಕ್ಕಳಿಗೆ ಪರೀಕ್ಷಾ ಭಯ ತುಂಬಲಾಗಿದೆ. ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ 10ನೇ ತರಗತಿಯವರೆಗೆ ಪರೀಕ್ಷೆ ಇರುವುದಿಲ್ಲ ಎಂಬ ಕಾರಣಕ್ಕೆ ಸಾವಿರಾರು ಮಕ್ಕಳು ರಾಜ್ಯ ಪಠ್ಯಕ್ರಮದ ಶಾಲೆ ತೊರೆಯುತ್ತಿದ್ದಾರೆ ಎಂದಿದ್ದಾರೆ.
ಶಿಕ್ಷಕರ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳ ಗುಣಮಟ್ಟ ಕುಸಿದಿದೆ. ಗುಣಮಟ್ಟ ಸುಧಾರಣೆಗೆ ಪರೀಕ್ಷೆ ಪರಿಹಾರ ಎನ್ನುವುದು ತಿಳಿವಳಿಕೆ ಇಲ್ಲದವರ ನಿರ್ಧಾರ. ನಿರಂತರ ಮೌಲ್ಯಾಂಕನ ಪದ್ಧತಿಯಲ್ಲಿ ಪಾಠ ಮಾಡುವ ಶಿಕ್ಷಕರೇ ಮಕ್ಕಳನ್ನು ಮೌಲ್ಯಾಂಕನಕ್ಕೆ ಒಳಪಡಿಸುತ್ತಾರೆ. ಕಲಿಕೆಯಲ್ಲಿನ ಹಿಂದುಳಿದಿರುವುವಿಕೆ ಗುರುತಿಸಿ ಪರ್ಯಾಯ ಬೋಧನೆ ಮಾಡುವುದೇ ಸರಿಯಾದ ಪದ್ಧತಿ ಎಂದು ಸಲಹೆ ನೀಡಿದ್ದಾರೆ.
ಬಿಜೆಪಿ ಸರ್ಕಾರ ಕಳೆದ ವರ್ಷ 5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ಪರಿಚಯಿಸಿದನ್ನು ವಿರೋಧಿಸಿದ್ದ ಕಾಂಗ್ರೆಸ್ ಈಗ ಅದೇ ನೀತಿ ಅನುಸರಿಸಲು ಮುಂದಾಗಿದೆ. ಶಿಕ್ಷಣ ಕ್ಷೇತ್ರವನ್ನು ಕಾರ್ಪೊರೇಟ್ ತೆಕ್ಕೆಗೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.