ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿಯಲ್ಲಿ ಪ್ರತಿಭಟನೆ ನಡೆಸಬೇಕಾದ ಸ್ಥಿತಿ ಬಂದಿದೆ; ಸಚಿವ ಜಿ. ಪರಮೇಶ್ವರ

Published 3 ಫೆಬ್ರುವರಿ 2024, 15:41 IST
Last Updated 3 ಫೆಬ್ರುವರಿ 2024, 15:41 IST
ಅಕ್ಷರ ಗಾತ್ರ

ಬೆಂಗಳೂರು: ‘ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ. ರಾಜ್ಯದ ಸಚಿವರ ಭೇಟಿಗೂ ಕೇಂದ್ರದ ಸಚಿವರು ಸಮಯ ಕೊಡುತ್ತಿಲ್ಲ. ಈ ಕಾರಣಕ್ಕೆ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬಿಜೆಪಿಯವರು ರಾಜ್ಯ ಸರ್ಕಾರದ ವಿರುದ್ಧ ಧರಣಿ ನಡೆಸುವುದೇ ಹಾಸ್ಯಾಸ್ಪದ. ತಮ್ಮಲ್ಲಿ ಯಾವ ನೈತಿಕತೆ ಉಳಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಾರೆ’ ಎಂದು ಪ್ರಶ್ನಿಸಿದರು.

‘ನ್ಯಾಯಸಮ್ಮತವಾಗಿ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನಿಧಿ ಬಿಡುಗಡೆ ಮಾಡುವಂತೆ ಬಿಜೆಪಿ ಪ್ರತಿಭಟಿಸಲಿ. ಅದನ್ನು ಬಿಟ್ಟು ಇಲ್ಲಿ ಪ್ರತಿಭಟನೆ ನಡೆಸಿದರೆ ಏನು ಅರ್ಥ? ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದೆ. ಬರ ಪರಿಹಾರ ಬಿಡುಗಡೆ ಮಾಡುವಂತೆ ರಾಜ್ಯದ 27 ಸಂಸದರು ಪ್ರಧಾನಿ, ಗೃಹ ಸಚಿವರಿಗೆ ಏಕೆ ಮನವಿ ಮಾಡುವುದಿಲ್ಲ’ ಎಂದೂ ಕೇಳಿದರು.

‘ಬರದಿಂದ ಕಂಗೆಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ತಲಾ ₹ 2 ಸಾವಿರದಂತೆ ಈಗಾಗಲೇ ಹಣ ವರ್ಗಾಯಿಸಲಾಗಿದೆ. ಕುಡಿಯುವ ನೀರು ಮತ್ತು ಇತರ ಸೌಲಭ್ಯಗಳನ್ನು ಒದಗಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಆದರೆ, ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.

ಪ್ರಲ್ಹಾದ ಜೋಶಿ ವ್ಯಂಗ್ಯ

ಹುಬ್ಬಳ್ಳಿ: ‘ಕುಣಿಯಲು ಬಾರದವರು ನೆಲ ಡೊಂಕು ಅಂದರಂತೆ ಎಂಬ ಗಾದೆ ರೀತಿ ಆರ್ಥಿಕ ನಿರ್ವಹಣೆ ಮಾಡಲಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಧರಣಿ ಮಾಡಲು ಹೊರಟಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು.

‘ಪೂರ್ವತಯಾರಿ ಇಲ್ಲದೇ ಗ್ಯಾರಂಟಿ ಯೋಜನೆ ಗಳನ್ನು ಘೋಷಿಸಿದರು. ಅದಕ್ಕೆ ಹಣ ಹೊಂದಿಸಲು ಪರದಾಡುತ್ತಿದ್ದಾರೆ. ಆರ್ಥಿಕ ಶಿಸ್ತು ಪಾಲಿಸದೇ ಈಗ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಸಿದ್ಧತೆ ನಡೆಸಿದ್ದಾರೆ. ಇದರಲ್ಲಿ ರಾಜ್ಯದ ಹಿತವೇನೂ ಇಲ್ಲ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT