ಬೆಂಗಳೂರು: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ಗಾಗಿ ಮಾಜಿ ಸಚಿವರ ನಡುವೆ ಪೈಪೋಟಿ ಏರ್ಪಟ್ಟಿದೆ.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವ ರಮಾನಾಥ ರೈ ಮತ್ತು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ. ಈ ಪೈಕಿ ಒಬ್ಬರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಅಭ್ಯರ್ಥಿ ಆಯ್ಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್ ಮತ್ತು ಮಂಜುನಾಥ್ ಭಂಡಾರಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕೆಪಿಸಿಸಿ ಶಿಫಾರಸು ಮಾಡಲಿರುವ ಹೆಸರುಗಳನ್ನು ಪರಿಶೀಲಿಸಿ, ಪಕ್ಷದ ವರಿಷ್ಠರು ಟಿಕೆಟ್ ಅಂತಿಮಗೊಳಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.