ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಲ್ಲಿ‌ದ್ದರೂ ಬಂದು ಪೊಲೀಸರಿಗೆ ಶರಣಾಗುವಂತೆ ಪ್ರಜ್ವಲ್‌ಗೆ ದೇವೇಗೌಡ ತಾಕೀತು

Published 23 ಮೇ 2024, 11:25 IST
Last Updated 23 ಮೇ 2024, 11:25 IST
ಅಕ್ಷರ ಗಾತ್ರ

ಬೆಂಗಳೂರು: ಎಲ್ಲಿ‌ದ್ದರೂ ಬಂದು ಪೊಲೀಸರಿಗೆ ಶರಣಾಗಬೇಕು, ವಿಚಾರಣೆ ಎದುರಿಸಬೇಕು ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು ತಮ್ಮ ಮೊಮ್ಮಗನೂ ಆದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಕರೆ ನೀಡಿದ್ದು, ತಪ್ಪಿದರೆ ಕುಟುಂಬದಿಂದ ಏಕಾಂಗಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಕುರಿತು ಬರೆದ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು, ‘ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ.  ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪ ಎದುರಿಸಬೇಕಾಗುತ್ತದೆ.  ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ತಲೆಬಾಗದಿದ್ದಲ್ಲಿ, ಏಕಾಂಗಿಯಾಗಬೇಕಾಗುತ್ತದೆ. ನನ್ನ ಬಗ್ಗೆ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು’ ಎಂದು ಹೇಳಿದ್ದಾರೆ.

‘ನಾನು ಅಥವಾ ನನ್ನ ಕುಟುಂಬ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗಬೇಕು. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲ ನನ್ನ ರಾಜಕೀಯ ಜೀವನದುದ್ದಕ್ಕೂ ಜತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ. ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ’ ಎಂದಿದ್ದಾರೆ.

‘ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು  ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ಎಚ್. ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.  

‘ಕೆಲವು ದಿನಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದ ಕುರಿತು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನಾನು ಅವರು ಮಾತುಗಳನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ಟೀಕಿಸುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ವಾದಕ್ಕೆ ಇಳಿಯುವುದಿಲ್ಲ. ಆದರೆ, ಪ್ರಜ್ವಲ್‌ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆಯೂ ತಿಳಿದಿಲ್ಲ. ಈ ಕುರಿತು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎನ್ನುವ ನಂಬಿಕೆ ಇದೆ’ ಎಂದಿದ್ದಾರೆ.

‘ಘಟನೆಯ ನಂತರ ನಡೆದ ರಾಜಕೀಯ ಪಿತೂರಿಗಳು, ಚಿತಾವಣೆ, ಉತ್ಪ್ರೇಕ್ಷೆ ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಬೇಡ, ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ. ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಲದಲ್ಲಿ ಇರಿಸಿದ್ದೇನೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT