ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

CM ವಿರುದ್ಧ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಅರ್ಜಿ: ಆ. 29ರವರೆಗೆ ಕ್ರಮ ಬೇಡವೆಂದ HC

Published 19 ಆಗಸ್ಟ್ 2024, 11:17 IST
Last Updated 19 ಆಗಸ್ಟ್ 2024, 11:17 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ’ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್ ಅವರು‌ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಇದೇ 29ರವರೆಗೆ ಯಾವುದೇ ಕ್ರಮಕ್ಕೆ ಮುಂದಾಗದಂತೆ ಹೈಕೋರ್ಟ್‌ ಆದೇಶಿಸಿದೆ.

ಏತನ್ಮಧ್ಯೆ, ‘ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ನಿರ್ದೇಶಿಸಬೇಕು ಎಂದು ಕೋರಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಮೂವರು ಫಿರ್ಯಾದುದಾರರು ಇದೇ 29ರವರೆಗೆ ಯಾವುದೇ ಕ್ರಮಕ್ಕೆ ಮುಂದಿನ ಹೆಜ್ಜೆ ಇರಿಸಬಾರದು’ ಎಂದು ತಾಕೀತು ಮಾಡಿದೆ.

ರಾಜ್ಯಪಾಲರು ಪ್ರಕರಣದ ತನಿಖೆಗೆ ನೀಡಿರುವ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ ರಿಟ್‌ ಅರ್ಜಿಯನ್ನು, ‘ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸೋಮವಾರ ಮಧ್ಯಾಹ್ನ ವಿಚಾರಣೆ ನಡೆಸಿದರು. 

‘ರಾಜ್ಯಪಾಲರ ಆದೇಶದ ಬಗ್ಗೆ ಜಿಲ್ಲಾ ನ್ಯಾಯಾಲಯ ತೀರ್ಮಾನಿಸಲು ಸಾಧ್ಯವೇ’ ಎಂಬ ಜಿಜ್ಞಾಸೆ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ‘ಈ ವಿಚಾರವನ್ನು ಸಾಂವಿಧಾನಿಕ ಕೋರ್ಟ್ ಆದ ಹೈಕೋರ್ಟ್ ತೀರ್ಮಾನಿಸಬೇಕಲ್ಲವೇ’ ಎಂದು ಪ್ರಶ್ನಿಸಿದರು.

‘ಈ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ವಾದ ಇನ್ನಷ್ಟೇ ಪೂರ್ಣಗೊಳ್ಳಬೇಕಿದೆ. ಮುಂದಿನ ವಿಚಾರಣೆವರೆಗೆ ಸಂಬಂಧಿತ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ತನ್ನ ಪ್ರಕ್ರಿಯೆಯನ್ನು ಮುಂದೂಡಬೇಕು. ಮುಂದಿನ ವಿಚಾರಣೆವರೆಗೆ ಅಧೀನ ನ್ಯಾಯಾಲಯವು ಯಾವುದೇ ಆತುರದ ನಿರ್ಧಾರ ಕೈಗೊಳ್ಳಬಾರದು’ ಎಂದು ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT