ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ವರುಣಾ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ
Published 21 ಜುಲೈ 2023, 14:37 IST
Last Updated 21 ಜುಲೈ 2023, 14:37 IST
ಅಕ್ಷರ ಗಾತ್ರ

ಬೆಂಗಳೂರು: ‘ಮೈಸೂರಿನ ವರುಣಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿಯೂ ಆಯ್ಕೆಯಾಗಿದ್ದು ಇವರ ಆಯ್ಕೆ ಕಾನೂನು ವಿರೋಧಿಯಾಗಿದೆ ಎಂದು ಆರೋಪಿಸಿ ಮತ್ತು ಇವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು‘ ಎಂದು ಕೋರಿ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಲಾಗಿದೆ.

ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ನಿವಾಸಿ ಕೆ.ಎಂ. ಶಂಕರ್ ಈ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯು ಶುಕ್ರವಾರ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ದಸ್ತಾವೇಜು ಕಚೇರಿ ಎತ್ತಿರುವ ಹಲವು ಆಕ್ಷೇಪಣೆಗಳನ್ನು ನಿವಾರಿಸುವಂತೆ ಅರ್ಜಿದಾರ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿತು.

ಕೋರಿಕೆ ಏನು?

‘ಚುನಾವಣೆಗೂ ಮುನ್ನ ಕಾಂಗ್ರೆಸ್ ‍ಪಕ್ಷವು ಮತದಾರರಿಗೆ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ  ಆಮಿಷ ಒಡ್ದಿದೆ. ಈ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಸಮ್ಮತಿಯೊಂದಿಗೇ ಪ್ರಕಟಿಸಲಾಗಿದೆ. ಇವು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಇದು ಲಂಚಕ್ಕೆ ಸಮವಾದುದು. ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 123 (1) ಪ್ರಕಾರ ಮತ್ತು ಕಲಂ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನ. ಕಲಂ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧ. ಆದ್ದರಿಂದ, ಅಕ್ರಮಗಳನ್ನು ಎಸಗುವ ಮೂಲಕ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು‘ ಎಂದು ಕೋರಿದ್ದಾರೆ. ಅರ್ಜಿಯಲ್ಲಿ ಸಿದ್ದರಾಮಯ್ಯ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT