ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಲ್ಯಾಂಪ್ಸ್: ಖಾಸಗಿ ಷೇರು ಖರೀದಿಗೆ ಕ್ರಮ- ಸಚಿವ ಎಂ.ಬಿ. ಪಾಟೀಲ

Published 13 ಫೆಬ್ರುವರಿ 2024, 14:33 IST
Last Updated 13 ಫೆಬ್ರುವರಿ 2024, 14:33 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇ 5.6ರಷ್ಟು ಷೇರುಗಳು ಖಾಸಗಿಯವರ ಒಡೆತನದಲ್ಲಿದೆ. ಆ ಷೇರುಗಳನ್ನು ಸರ್ಕಾರವೇ ಖರೀದಿಸಿ ಶೇ 100ರಷ್ಟು ಸರ್ಕಾರಿ ಸಂಸ್ಥೆಯಾಗಿ ಮಾಡುವ ಪ್ರಯತ್ನ ನಡೆದಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ಎಸ್.ಎಲ್. ಬೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಮೈಸೂರು ಲ್ಯಾಂಪ್ಸ್‌ ಕಂಪನಿಯನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಸಂಸ್ಥೆಯಾಗಿ ಮಾಡಿದ ನಂತರ, ಅದರ ಅಸ್ತಿಗಳನ್ನು ಸಾರ್ವಜನಿಕ ಉದ್ದೇಶಗಳಿಗೆ ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು. ಅದರ ಆಸ್ತಿ ಖಾಸಗಿ ವ್ಯಕ್ತಿಗಳ, ಸಂಸ್ಥೆಗಳ ಪಾಲಾಗಲು ಬಿಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘‍ಸದ್ಯ ಈ ಕಂಪನಿಯಲ್ಲಿ ಸರ್ಕಾರದ ಷೇರು ಶೇ 91.07ರಷ್ಟಿದೆ. ಸರ್ಕಾರಿ ಸ್ವಾಮ್ಯದ ಎನ್‌ಜಿಇಎಫ್ ಸಂಸ್ಥೆ ಶೇ 3.33ರಷ್ಟು ಷೇರು ಬಂಡವಾಳ ಹೊಂದಿದೆ. ಉಳಿದ ಶೇ 5.6ರಷ್ಟು ಷೇರು ಬಂಡವಾಳ ಸಾರ್ವಜನಿಕರದ್ದು’ ಎಂದರು.

‘ಮೈಸೂರು ಲ್ಯಾಂಪ್ಸ್ ಮತ್ತು ಎನ್‌ಜಿಇಎಫ್ ಸಂಸ್ಥೆಗೆ ಸೇರಿದ ಜಾಗಗಳಲ್ಲಿ ಸಾರ್ವಜನಿಕ ಉದ್ದೇಶದ ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲು 2021ರಲ್ಲಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಲಾಗಿತ್ತು. ಈ ಟ್ರಸ್ಟ್‌ಗೆ ಮುಖ್ಯ ಕಾರ್ಯದರ್ಶಿ ಅಧ್ಯಕ್ಷ. ಅಲ್ಲದೆ, ಸರ್ಕಾರದ ಕಡೆಯಿಂದ ಏಳು ಮತ್ತು ಸಾರ್ವಜನಿಕ ವಲಯದಿಂದ ಐದು ಟ್ರಸ್ಟಿಗಳನ್ನು ನೇಮಿಸಲು ಅವಕಾಶವಿದೆ. ಈ ಟ್ರಸ್ಟ್‌ಗೆ  ಸರ್ಕಾರದ ಕಡೆಯಿಂದ ಈವರೆಗೆ ಯಾವುದೇ ಚಟುವಟಿಕೆ ಕೈಗೊಳ್ಳಲು ಸೂಚನೆ ನೀಡಿಲ್ಲ’ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT