ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್‌ಐಟಿ ತನಿಖೆ ಪಾರದರ್ಶಕವಾಗಿಲ್ಲ: ಭವಾನಿ ರೇವಣ್ಣ ಪರ ವಕೀಲರ ಆಕ್ಷೇಪ

ಭವಾನಿ ರೇವಣ್ಣ ಜಾಮೀನು: ಆದೇಶ 31ಕ್ಕೆ
Published 29 ಮೇ 2024, 14:34 IST
Last Updated 29 ಮೇ 2024, 14:34 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಅವರ ತಾಯಿ ಭವಾನಿ ಅವರನ್ನು ವಿಚಾರಣೆ ನಡೆಸಲು ಮುಂದಾಗಿರುವ ಎಸ್‌ಐಟಿ ನಡೆಯಲ್ಲಿ ದುರುದ್ದೇಶವಿದ್ದು, ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ’ ಎಂದು ಭವಾನಿ ರೇವಣ್ಣ ಪರ ಹಿರಿಯ ವಕೀಲರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಪ್ರಕರಣದ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪದಡಿ ಬಂಧನ ಭೀತಿಯಿಂದ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು, ‘ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಬುಧವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಭವಾನಿ ರೇವಣ್ಣ ಪರ ಹೈಕೋರ್ಟ್‌ನ ಹಿರಿಯ ವಕೀಲ ಸಂದೇಶ್ ಜೆ.ಚೌಟ ವಾದ ಮಂಡಿಸಿ, ‘ಭವಾನಿ ವಿರುದ್ಧದ ಆರೋಪಗಳು ರಾಜಕೀಯ ಷಡ್ಯಂತ್ರ ಷಡ್ಯಂತ್ರದಿಂದ ಕೂಡಿವೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಇಲ್ಲ. ಆರೋಪಿಯು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ. ಆದ್ದರಿಂದ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಯಾಗಿ ಪ್ರಾಸಿಕ್ಯೂಷನ್‌ ಪರ ಹಾಜರಿದ್ದ ವಿಶೇಷ ಪ್ರಾಸಿಕ್ಯೂಟರ್ ಬಿ.ಎನ್‌.ಜಗದೀಶ್‌, ‘ಪ್ರಕರಣದ ಅನೇಕ ಆರೋಪಿಗಳ ಜೊತೆ ಭವಾನಿ ಫೋನ್‌ ಸಂಭಾಷಣೆ ನಡೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ಸಂಭಾಷಣೆಯಲ್ಲಿ ಭವಾನಿಯವರ ಪಾತ್ರವನ್ನು ನಿರೂಪಿಸುವ ಹಲವು ಸ್ವಾರಸ್ಯಕರ ಅಂಶಗಳಿವೆ’ ಎಂದರು.

ಇದನ್ನು ಅಲ್ಲಗಳೆದ ಸಂದೇಶ್‌ ಚೌಟ ಅವರು, ‘ಅಪಹರಣಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆ ಭವಾನಿ ರೇವಣ್ಣ ಅವರ ಮನೆಯ ಹಳೆಯ ಕೆಲಸದಾಕೆ. ಆಕೆ ಮೂರು ವರ್ಷಗಳ ಹಿಂದೆ ಕೆಲಸ ಬಿಟ್ಟಿದ್ದರು. ಆಕೆಯನ್ನು ಪುನಃ ಮನೆಗೆ ಕರೆಸಿಕೊಳ್ಳಲಾಗಿತ್ತು ಮತ್ತು 26 ರಂದು ವಾಪಸು ಕಳುಹಿಸಲಾಗಿದೆ. ಆಕೆ ಮನೆಯಿಂದ ಹೋಗುವಾಗ ಬೈಕ್ ಹತ್ತಿ ಹೋಗಿದ್ದಾರೆ. ಇಲ್ಲಿ ಯಾರ ಒತ್ತಡವಿಲ್ಲ, ಬಲವಂತವಿಲ್ಲ. ಹೀಗಿರುವಾಗ ಅಪಹರಣ ಆರೋಪ ಉದ್ಭವಿಸಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.

ಸುದೀರ್ಘ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ಆದೇಶವನ್ನು ಇದೇ 31ರಂದು ಪ್ರಕಟಿಸುವುದಾಗಿ ತಿಳಿಸಿತು.

ಪ್ರಕರಣವೇನು?:

‘ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 364ಎ, 365 ಮತ್ತು 34 ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಭವಾನಿಯವರ ಪತಿ ಎಚ್‌.ಡಿ.ರೇವಣ್ಣ ಮೊದಲ ಆರೋಪಿಯಾಗಿದ್ದರೆ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಭವಾನಿ ಅವರು ಜಾಮೀನು ಕೋರಿದ್ದಾರೆ.

ಪ್ರಜ್ವಲ್‌ ಅರ್ಜಿ: ಪ್ರಜ್ವಲ್‌ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಪ್ರಜ್ವಲ್‌ ಪರ ವಕೀಲರು ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರಿಗೆ ಮನವಿ ಮಾಡಿದರು. ಆದರೆ, ಇದನ್ನು ತಳ್ಳಿ ಹಾಕಿದ ನ್ಯಾಯಾಧೀಶರು ಇದೇ 31ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT