ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಣೆ

Published 4 ಅಕ್ಟೋಬರ್ 2023, 16:50 IST
Last Updated 4 ಅಕ್ಟೋಬರ್ 2023, 16:50 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ.

ಜಾಮೀನು ಕೋರಿ ಆರೋಪಿಗಳಾದ ಕೆ.ಇಸ್ಮಾಯಿಲ್‌ ಶಫಿ, ಕೆ.ಮೊಹಮ್ಮದ್‌ ಇಕ್ಬಾಲ್‌ ಮತ್ತು ಎಂ.ಶಹೀದ್‌ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ ಮತ್ತು ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಪ್ರಕಟಿಸಿದೆ.

‘ಪ್ರವೀಣ್‌ ನೆಟ್ಟಾರು ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಮೂವರೂ ಆರೋಪಿಗಳು ಭೌತಿಕವಾಗಿ ಹಾಜರಿರಲಿಲ್ಲ ನಿಜ. ಆದರೆ, ಅವರ ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಪಿತೂರಿ ಸಭೆಯಲ್ಲಿ ಭಾಗವಹಿಸಿದ್ದರು ಮತ್ತು ಹತ್ಯೆಯಲ್ಲಿ ಸಕ್ರಿಯ ಪಾತ್ರ ವಹಿಸಿರುವುದನ್ನು ಸಾಬೀತುಪಡಿಸಲು ಸೂಕ್ತ ಸಾಕ್ಷ್ಯಧಾರಗಳಿವೆ‘ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಮೇಲ್ಮನವಿ ತಿರಸ್ಕರಿಸಿದೆ. ಮೇಲ್ಮನವಿದಾರರ ಪರ ಮೊಹಮದ್‌ ತಾಹಿರ್‌ ಮತ್ತು ಪ್ರಾಸಿಕ್ಯೂಷನ್‌ ಪರ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.

2022ರ ಜುಲೈ 26ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬೈಕ್‌ನಲ್ಲಿ ಬಂದ ಅಪರಿಚಿತರು ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದು ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT